ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ, ಮಾಜಿ ವಿದೇಶಾಂಗ ಸಚಿವ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯ, ರಾಷ್ಟ್ರ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿ ಕಂಬನಿ ಮುಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಸೋಮಣ್ಣ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಗಣ್ಯರು ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
1 ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಹಿರಿಯರು, ಮುತ್ಸದ್ದಿಗಳಾದ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಬಹಳ ನೋವುಂಟಾಯಿತು.
ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
2 ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಮಾಜಿ ವಿದೇಶಾಂಗ ಸಚಿವರು ಹಾಗು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ಎಸ್‌ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಅವರ ಕುಟುಂಬದವರಂತೆ ನಾನೂ ಸಮಾನ ದುಃಖಿ.
ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಪ್ರಾರ್ಥಿಸಿದ್ದಾರೆ.
3 ಕರ್ನಾಟಕ ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ, ಶಿಸ್ತು ಹಾಗೂ ಪ್ರಬುದ್ಧ ಆಡಳಿತಕ್ಕೆ ಮಾದರಿಯಾಗಿದ್ದ ನಾಡಿನ ಇತಿಹಾಸದಲ್ಲಿ ತಮ್ಮ ಸಜ್ಜನಿಕೆ ಹಾಗೂ ಘನತೆಯ ನಡವಳಿಕೆಯಿಂದ ವಿಶೇಷ ಚಾಪು ಮೂಡಿಸಿದ್ದ ಎಸ್.ಎಂ ಕೃಷ್ಣ ಅವರು ಇನ್ನಿಲ್ಲವಾಗಿರುವ ಸುದ್ದಿ ಅತ್ಯಂತ ನೋವು ತಂದಿದೆ.
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಹುದ್ದೆಗಳನ್ನು ಅಲಂಕರಿಸಿ ಇತಿಹಾಸದಲ್ಲಿ ತಮ್ಮ ಶಾಶ್ವತ ಹೆಜ್ಜೆ ಗುರುತು ಮೂಡಿಸಿರುವ ಹೆಮ್ಮೆಯ ಕನ್ನಡಿಗ ಎಸ್.ಎಂ ಕೃಷ್ಣರವರು ಮುಖ್ಯಮಂತ್ರಿಗಳಾಗಿ ಕರ್ನಾಟಕದ ಅಭಿವೃದ್ಧಿಗೆ ಅದರಲ್ಲೂ ಬೆಂಗಳೂರನ್ನು ಸಿಲಿಕಾನ್ ಸಿಟಿ ಎನಿಸಿಕೊಳ್ಳಲು ಕೊಟ್ಟ ಕೊಡುಗೆ ಎಂದೆಂದಿಗೂ ಮರೆಯಲಾಗದು.
ಕೇಂದ್ರ ಸಚಿವ ಸಂಪುಟದಲ್ಲಿ ವಿವಿಧ ಹುದ್ದೆಗಳೊಂದಿಗೆ ಮಹತ್ವದ ವಿದೇಶಾಂಗ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿ ಮಹಾರಾಷ್ಟ್ರದ ರಾಜ್ಯಪಾಲರು ಆಗಿ ಸೇವೆ ಸಲ್ಲಿಸಿದ್ದ ಮಾನ್ಯ ಕೃಷ್ಣರವರು ನಾಲ್ಕು ತಲೆಮಾರಿನ ರಾಜಕಾರಣದ ಬಹುದೊಡ್ಡ ಕೊಂಡಿಯಾಗಿದ್ದರು. ಆರೋಗ್ಯಕರ ಮನಸ್ಸು ಕ್ರಿಯಾಶೀಲತೆಯ ಸಂಕೇತ ಎನ್ನುವ ನಿಟ್ಟಿನಲ್ಲಿ ತಮ್ಮ ಬದುಕಿನ ಕೊನೆಯ ಉಸಿರಿರುವವರೆಗೂ ಸಂಸ್ಕಾರ ಹಾಗೂ ಸುಸಂಸ್ಕೃತ ನಡವಳಿಕೆಯನ್ನು ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದರು. ತಮ್ಮ ಇಡೀ ರಾಜಕಾರಣದ ಜೀವನದಲ್ಲಿ ಕಪ್ಪು ಕಲೆಯನ್ನು ಎಂದೂ ಅಂಟಿಸಿಕೊಳ್ಳದ ಕೃಷ್ಣರವರು ಪರಿಶುಭ್ರತೆಗೆ ಮಾದರಿಯಾಗಿದ್ದರು.
ಕರ್ನಾಟಕದ ರಾಜಕಾರಣದಲ್ಲಿ ಕೃಷ್ಣರಿಗೆ ಕೃಷ್ಣರೇ ಸಾಟಿ ಅವರಿಲ್ಲದ ಕರುನಾಡು ನೆನೆಸಿಕೊಳ್ಳುವುದು ಅತ್ಯಂತ ಕಷ್ಟಕರ, ನಮ್ಮಂತ ಯುವ ಪೀಳಿಗೆಯ ರಾಜಕಾರಣಿಗಳಿಗೆ ಅವರು ಆದರ್ಶದ ದಾರಿದೀಪ, ಅವರು ಇಹಲೋಕವನ್ನು ತ್ಯಜಿಸಿದರೂ ಅವರ ನಡೆ-ನುಡಿ ನಿತ್ಯವೂ ಜೀವಂತವಾಗಿ ರಾಜಕಾರಣದ ಆಗಸದಲ್ಲಿ ಮಿನುಗುತ್ತಿರುತ್ತದೆ.
ಕರ್ನಾಟಕದ ಇತಿಹಾಸ ಇರುವವರೆಗೂ ಎಸ್ ಎಂ ಕೃಷ್ಣರು ಅಜರಾಮರ, ಅವರ ಅಗಲಿಕೆಯ ದುಃಖ ಅವರ ಕುಟುಂಬದಷ್ಟೇ ಲಕ್ಷಾಂತರ ಜನರನ್ನು ಬಾಧಿಸಲಿದೆ ಈ ದುಃಖದೊಂದಿಗೆ ನಾವು ಭಾಗಿಗಳು. ಎಸ್ಎಂ ಕೃಷ್ಣ ರವರ ರಾಜಕೀಯದ ಕೊನೆಯ ದಿನದ ನಿಲುವುಗಳು ಭಾರತದ ಸುಭದ್ರತೆಗೆ ಪ್ರೇರಣೆಯ ಶಕ್ತಿಯಾಗಿತ್ತು, ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಅವರ ಆತ್ಮ ಸದಾ ಕರುನಾಡು ಹಾಗೂ ದೇಶಕ್ಕಾಗಿ ಮಿಡಿಯುತ್ತಿರುತ್ತದೆ ಎಂಬ ಭಾವ ನನ್ನದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ ಸೂಚಿಸಿ ಕಣ್ಣೀರು ಹಾಕಿದ್ದಾರೆ.
4 ಕನ್ನಡನಾಡು ಕಂಡ ಅತ್ಯದ್ಭುತ ರಾಜಕೀಯ ಮುತ್ಸದ್ಧಿ, ರಾಜ್ಯದ ಮುಖ್ಯಮಂತ್ರಿಗಳಾಗಿಯೂ, ಕೇಂದ್ರ ಮಂತ್ರಿಗಳಾಗಿಯೂ, ರಾಜ್ಯಪಾಲರಾಗಿಯೂ ಜನಸೇವೆಗೈದ ಶ್ರೀ ಎಸ್.ಎಂ.ಕೃಷ್ಣ ಅವರು ನಿಧನ ಹೊಂದಿರುವುದು ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ದೇಶದ ರಾಜಕೀಯ ರಂಗದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ದೂರದೃಷ್ಟಿತ್ವದೊಂದಿಗೆ ಪಕ್ಷಾತೀತವಾಗಿ ಗೌರವಿಸಲ್ಪಡುವ ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ ಹಾಗೂ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಪ್ರಾಥಿಸಿದ್ದಾರೆ.
5 ಶ್ರೀ ಎಸ್.ಎಂ ಕೃಷ್ಣ ಅವರು ಅಸಾಧಾರಣ ನಾಯಕರಾಗಿದ್ದರು. ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ. ಶ್ರೀ ಎಸ್.ಎಂ ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
6 ಸಜ್ಜನಿಕೆ ಮತ್ತು ಘನತೆಯ ನಡವಳಿಕೆಯ ಸುಸಂಸ್ಕೃತ ಮುತ್ಸದ್ದಿ ರಾಜಕಾರಣಿ, ಪ್ರಬುದ್ಧ ಆಡಳಿತಗಾರ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ ಕೃಷ್ಣ ಅವರ ನಿಧನ ಅಪಾರ ನೋವು ತಂದಿದೆ.
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಹುದ್ದೆಗಳನ್ನು ಅಲಂಕರಿಸಿ ಇತಿಹಾಸದಲ್ಲಿ ತಮ್ಮ ಶಾಶ್ವತ ಹೆಜ್ಜೆ ಗುರುತು ಮೂಡಿಸಿರುವ ಎಸ್.ಎಂ ಕೃಷ್ಣರವರು ಕನ್ನಡಿಗರ ಹೆಮ್ಮೆ. ಬೆಂಗಳೂರು ಸಿಲಿಕಾನ್ ಸಿಟಿ ಎನಿಸಿಕೊಳ್ಳಲು ಅವರು ಕೊಟ್ಟ ಕೊಡುಗೆ ಬಹಳ.
ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಅವರ ಅಭಿಮಾನಿಗಳಿಗೆ ಭಗವಂತ ನೀಡಲಿ, ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಾರ್ಥಿಸಿದ್ದಾರೆ.
7 ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಇಂದು ಭೇಟಿ ಅಂತಿಮ ದರ್ಶನ ಪಡೆದೆ. ನನ್ನ ರಾಜಕೀಯ ಮಾರ್ಗದರ್ಶಿಗಳಾಗಿದ್ದ ಕೃಷ್ಣ ಅವರ ಜೊತೆ ಕಳೆದ ನೆನಪುಗಳು ಸ್ಮೃತಿಪಟಲದಲ್ಲಿ ಹಾದುಹೋದವು. ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಗಳು ಅವಿಸ್ಮರಣೀಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣ್ಣೀರು ಹಾಕಿದ್ದಾರೆ.
8 ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು.
ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಣ್ಣೀರು ಹಾಕಿ ಸಂತಾಪ ಸೂಚಿಸಿ ಆತ್ಮ ಶಾಂತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
9 ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ, ಹಿರಿಯ ರಾಜಕಾರಣಿ, ಸ್ವಾತಂತ್ರ್ಯ ಪೂರ್ವದ ತಲೆಮಾರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಅನೇಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖ ಹಾಗೂ ದಿಗ್ಧಮೆ ಆಗಿದೆ.
ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದ ದೇಶ ಒಬ್ಬ ಹಿರಿಯರು, ಮಾರ್ಗದರ್ಶಕರನ್ನು ಕಳೆದುಕೊಂಡು ಬಡವಂತಾಗಿದೆ. ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪರಿಶುದ್ಧವಾದ ಬದುಕು ನಡೆಸಿ, ಆದರ್ಶ ಮಯ ಜೀವನ ನಡೆಸಿ, ಇಡೀ ಭಾರತಕ್ಕೆ ಪ್ರಿಯರಾಗಿರುವಂತಹವರು. ಎಸ್.ಎಂ ಕೃಷ್ಣ, ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದ ನಂತರ ತಮ್ಮ ಸೊಸಿಯಲಿಸ್ ಮನೋಭಾವನೆ ಬಿಟ್ಟುಕೊಡದೇ ಪಥಮ ಬಾರಿಗೆ ಸ್ವತಂತವಾಗಿ ಸ್ಪರ್ಧೆ ಮಾಡಿ ಗೆದ್ದು ಬಂದಿದ್ದರು. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ನಾಲ್ಕೂ ಸದನಗಳಲ್ಲಿ ಸೇವೆ ಮಾಡಿದ್ದಾರೆ. ರಾಜ್ಯದ ಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ದೇಶದ ಸೇವೆ ಹಾಗೂ ರಾಜ್ಯದ ಸೇವೆ ಮಾಡಿದ್ದಾರೆ.
ರಾಜಕಾರಣಿಗಳಿಗೆ ಆದರ್ಶವಾಗಿರುವ, ಆಡಳಿತಗಾರರಿಗೆ ಮಾರ್ಗದರ್ಶನವಾಗಿರುವ ಅವರ ಭಾಷೆ, ಮಿತವ್ಯಯದ ಮಾತು, ಅವರ ನಡವಳಿಗೆ ನಮ್ಮ ಯುವ ರಾಜಕಾರಣಿಗಳಿಗೆ ಅತ್ಯಂತ ಅವಶ್ಯವಿದೆ. ಅವರು ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಬೆಂಗಳೂರಿನ ಬೆಳವಣಿಗೆ, ಐಟಿ ಬಿಟಿ ವಿಚಾರದಲ್ಲಿ ಅವರು ನೀಡಿದ ಕೊಡುಗೆ ಅಪಾರ, ಅವರು ಜಾರಿಗೆ ತಂದಿರುವ ಮಿಡ್ ಡೆ ಮೀಲ್ ಯೋಜನೆ ಯಶಸ್ವಿಯಾಗಿದೆ. ಅವರು ರಾಜಕಾರಣದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ಕೂಡ ತಮ್ಮ ವ್ಯಕ್ತಿತ್ವವನ್ನು ಬಿಟ್ಟುಕೊಡದೇ ಅತ್ಯಂತ ಸ್ವಾಭಿಮಾನದ ಬದುಕು ನಡೆಸಿದರು.
ಅವರು ಕರ್ನಾಟಕದಲ್ಲಿ ಬಿಜೆಪಿ ಸೇರಿ ನಮ್ಮ ಪಧಾನ ಮಂತ್ರಿಗಳಿಗೆ ಅತ್ಯಂತ ಹತ್ತಿರದ ನಾಯಕರಾಗಿದ್ದರು. ಹಿಂದಿನ ಪೀಳಿಗೆಯ ಮಹತ್ವದ ಘಟ್ಟ ಕಳೆದುಕೊಂಡಂತಾಗಿದೆ. ಬರುವಂತಹ ದಿನಗಳಲ್ಲಿ ಅವರ ಬದುಕು ನಮಗೆ ಆದರ್ಶವಾಗಲಿ, ಎಸ್.ಎಂ. ಕೃಷ್ಣ ಅವರು ನನಗೆ ವಯಕ್ತಿಕವಾಗಿ ಅತ್ಯಂತ ಹತ್ತಿರವಾಗಿದ್ದ ನಾಯಕರು, ನಮ್ಮ ತಂದೆಯ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ಅವರ ಅಗಲಿಗೆ ನನಗೆ ಬಹಳ ನೋವು ತಂದಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
CM ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.
ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿನಾನೂ ಭಾಗಿಯಾಗಿದ್ದೇನೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಗವಂತನಲ್ಲಿ ಕೋರಿದ್ದಾರೆ.