ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ನುಡಿನಮನ ಕಾರ್ಯಕ್ರಮ ಡಾ.ರಾಜ್ ಕಲಾಮಂದಿರದಲ್ಲಿ ನಡೆಯಿತು.
ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್. ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕಿನ ಅಭಿವೃದ್ದಿ ಕಾರ್ಯಗಳೊಂದಿಗೆ ಕನ್ನಡಪರವಾದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಸಹಕಾರ ಮತ್ತು ಪ್ರೋತ್ಸಾಹವನ್ನು ನೀಡುತ್ತಿದ್ದ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರು ಕನ್ನಡ ಸಾಹಿತಿಗಳು ಮತ್ತು ಕಲಾವಿದರೊಂದಿಗೆ ನಿಕಟಸಂಪರ್ಕ ಹೊಂದಿದ್ದರು.
ಜ್ಞಾನಪೀಠ ಪುರಸ್ಕೃತರಾದ ಡಾ.ಚಂದ್ರಶೇಖರ ಕಂಬಾರದೊಂದಿಗೆ ಆತ್ಮೀಯ ಒಡನಾಟವಿತ್ತು.ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡಪರ ಸಂಘಟನೆಗಳು ನಾಡು, ನುಡಿ, ಜಲ ಮುಂತಾದ ವಿಚಾರಗಳ ನಡೆಸುತ್ತಿದ್ದ ಸಭೆ, ಸಮಾರಂಭ ಮತ್ತು ಪ್ರತಿಭಟನಾ ಕಾರ್ಯಕ್ರಮಗಳಲ್ಲೂ ಜೆ.ನರಸಿಂಹಸ್ವಾಮಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಜೆ.ನರಸಿಂಹಸ್ವಾಮಿ ಅವರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಮಗ್ರ ಪರಿಚಯವಿತ್ತು. ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಸಂಪೂರ್ಣ. ಸಹಕಾರ ನೀಡುತ್ತಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲು ಜೆ.ನರಸಿಂಹಸ್ವಾಮಿ ತಮ್ಮ ಪತ್ನಿ ಗಂಗಮ್ಮ ಅವರ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ದತ್ತಿ ನಿಧಿನೀಡಿದರು. ಗಂಗಮ್ಮ ಜೆ.ನರಸಿಂಹಸ್ವಾಮಿ ದತ್ತಿ ಎಂಬ ಹೆಸರಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.
ನುಡಿನಮನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಗೌರವ ಕಾರ್ಯದರ್ಶಿ ಜ್ಯೋತಿಕುಮಾರ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆವಂಗಲ ಹೋಬಳಿ ಘಟಕದ ಅಧ್ಯಕ್ಷ ಸಿ.ಮುನಿವೀರಪ್ಪ, ಪ್ರತಿನಿಧಿ ಸಫೀರ್, ಹಣಬೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಸಿ.ಅಣ್ಣಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕುಮಾರ್ ಮುಂತಾದವರು ಭಾಗವಹಿಸಿದ್ದರು.