ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದಿಗಿಳಿದಿರುವ 25ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ
ಎರಡನೇ ದಿನವೂ ಕೊರೆವ ಚಳಿಯಲ್ಲಿಯೇ ರಾತ್ರಿ ಕಳೆದು ಮುಷ್ಕರ ನಡೆಸುತ್ತಿದ್ದರೂ ದಪ್ಪ ಚರ್ಮದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಿವಿ ಕೊಡದಿರುವುದು ಶ್ರಮಿಕ ವರ್ಗಗಳ ಮೇಲೆ ಈ ಸರ್ಕಾರಕ್ಕಿರುವ ಅಸಡ್ಡೆ ತನವನ್ನು ಸಾಕ್ಷೀಕರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದ್ದಾರೆ.
ಅಧಿಕಾರಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತೆಯರ ಮತ ಪಡೆಯಲು ಬೆಟ್ಟದಷ್ಟು ಪೊಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಬೇಡಿಕೆ ಈಡೇರಿಸದೇ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಲೆ ಕೊಡದ ಈ ಸರ್ಕಾರಕ್ಕೆ ನಾಡಿನ ಜನ ಹಿಡಿಶಾಪ ಹಾಕುತ್ತಿದ್ದಾರೆ. ಈ ಕೂಡಲೇ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲಿ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.