ಹಸುಗಳ ಕೆಚ್ಚಲು ಕೊಯ್ದು ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೂಕ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ.

ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಮಂಗಳವಾರ ಭೇಟಿ ನೀಡಿ, ಗೋ ಪೂಜೆ ನೆರವೇರಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಸುಗಳ ಕೆಚ್ಚಲು ಕೊಯ್ದ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ ಅಶೋಕ್ ಒಂದು ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ವೈಯಕ್ತಿಕವಾಗಿ ನೀಡಿದ್ದೇನೆ. ಅಲ್ಲದೆ ಬಿಜೆಪಿ ವತಿಯಿಂದ ಹಸು ಕೊಡಿಸಲಾಗಿದೆ ಎಂದು ತಿಳಿಸಿದರು.

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು ಎಂದು ಅಶೋಕ್ ಹೇಳಿದರು.
ಇಲ್ಲಿ ಸಂಕ್ರಾಂತಿ ಹಬ್ಬ, ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುವ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್‌ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ಅಶೋಕ್ ದೂರಿದರು.

ಕಾಂಗ್ರೆಸ್‌ನವರು ಒಂದು ಕೈಯಲ್ಲಿ ಹಸು ನೀಡಿ ಮತ್ತೊಂದು ಕಡೆ ಹಸು ಕತ್ತರಿಸುತ್ತಾರೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ನನಗೀಗ ಪೊಲೀಸರು ಹಾಗೂ ಸರ್ಕಾರದ ಮೇಲೆಯೇ ಅನುಮಾನ ಬಂದಿದೆ. ಆರೋಪಿ ಜೇಬಿನಲ್ಲಿ ಬ್ಲೇಡ್‌ಇಟ್ಟುಕೊಂಡು ಓಡಾಡುತ್ತಿದ್ದ, ಆತನಿಗೆ ಮತಿಭ್ರಮಣೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮತಿಭ್ರಮಣೆಯಾದ ವ್ಯಕ್ತಿ 10 ವರ್ಷ ಫ್ಯಾಕ್ಟರಿಯಲ್ಲಿ ಹೇಗೆ ಕೆಲಸ ಮಾಡಲು ಸಾಧ್ಯ? ಎಂದು ಆರ್.ಅಶೋಕ್ ಪ್ರಶ್ನಿಸಿದರು. ಮುಂಜಾನೆ 3 ರಿಂದ 4 ಗಂಟೆಗೆ ಆತ ಇಲ್ಲಿಗೆ ಬರಲು ಹೇಗೆ ಸಾಧ್ಯ?. ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ಣ ಅವರ ಹಸುವಿನ ಕೆಚ್ಚಲನ್ನೇ ಕೊಯ್ದಿದ್ದೇಕೆ?” ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಸುಗಳ ಮಾಲೀಕ ಕರ್ಣನಿಗೆ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಮಾತನಾಡಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಕಾಂಗ್ರೆಸ್ ಸರ್ಕಾರದ ಧೋರಣೆಯೇ ಕಾರಣ. ಈ ದುರ್ಘಟನೆ ಸಿದ್ದರಾಮಯ್ಯ ಅವರಿಗೆ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆಯದು ಮಾಡುವುದಿಲ್ಲ. ಇವರ ಪಾಪದ ಕೊಡ ತುಂಬಿದೆ. ಆದ್ದರಿಂದ ಇಂಥ ದುರ್ಘಟನೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾರೋ ಬಡಪಾಯಿಯನ್ನು ತಂದು ಅವನೇ ಹಸುಗಳ ಕೆಚ್ಚಲು ಕೊಯ್ದಿದ್ದಾನೆಂದು ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಚರ್ಚೆ ನಡೆದಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಹಸುವಿನ ಮಾಲೀಕರು ಬಡ ಕುಟುಂಬದಿಂದ ಬಂದಿದ್ದು ಎಲ್ಲವನ್ನೂ ಧೈರ್ಯದಿಂದ ಎದುರಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಭೇಟಿ ಮಾಡಿ
, ಗೋ ಪೂಜೆ ಮಾಡಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್ ರಾವ್, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಹಾಜರಿದ್ದರು.

- Advertisement -  - Advertisement - 
Share This Article
error: Content is protected !!
";