ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾದ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಐವರಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ ಜಾಮೀನನ್ನು ಪ್ರಶ್ನಿಸುವ ರಾಜ್ಯ ಸರ್ಕಾರದ ಮೇಲ್ಮನವಿ ಪರಿಶೀಲಿಸಲು ನ್ಯಾಯಾಲಯ ಒಪ್ಪಿಕೊಂಡಿದ್ದು ಆರೋಪಿತರಿಗೆ ನೋಟಿಸ್ ಜಾರಿ ಮಾಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ಪೀಠದ ಮುಂದೆ ಈ ಪ್ರಕರಣ ಪ್ರಸ್ತಾಪವಾಯಿತು. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್, ಪವಿತ್ರಾ ಗೌಡ, ನಾಗರಾಜು, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೂಷ್ಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಮೇಲ್ಮನವಿ ಇತ್ತೀಚೆಗಷ್ಟೇ ಸಲ್ಲಿಕೆಯಾಗಿತ್ತು.
ಪ್ರಕರಣ ಏನು: ಆಟೋರಿಕ್ಷಾ ಚಾಲಕರಾಗಿದ್ದ 33ರ ರೇಣುಕಾಸ್ವಾಮಿ ಅವರ ಮೃತದೇಹ ಕಳೆದ ವರ್ಷ ಜೂನ್-9ರಂದು ಪತ್ತೆಯಾಗಿತ್ತು. ನಂತರ ದೂರು ದಾಖಲಾಗಿ ಹೆಚ್ಚಿನ ತನಿಖೆ ಮುಂದುವರಿಯಿತು.
ಈ ಪ್ರಕರಣದಲ್ಲಿ ಭಾಗಿಯಾಗಿರೋ ಆರೋಪ ಹೊತ್ತಿರುವ 17 ಮಂದಿ ಆರೋಪಿಗಳಿಗೂ ಜಾಮೀನು ಸಿಕ್ಕಿತ್ತು. ಆದರೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾದ 7 ಆರೋಪಿಗಳ ಜಾಮೀನು ರದ್ದು ಕೋರಿ 1,492 ಪುಟಗಳ ಕಡತವನ್ನ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸಲ್ಲಿಸಿತ್ತು.”ಕರ್ನಾಟಕ ರಾಜ್ಯ ಸರ್ಕಾರ ಆರೋಪಿಗಳ ಜಾಮೀನು ರದ್ದಿಗೆ ಕೋರಿದ್ದು, ಆದೇಶದ ಕಾರ್ಯಾಚರಣೆಯನ್ನು ತಡೆಹಿಡಿಯುವುದು ಸೂಕ್ತವಲ್ಲ.
ಏಕೆಂದರೆ, ಅದು ಜಾಮೀನು ರದ್ದಿಗೆ ಸಮಾನವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸಲ್ಲಿಕೆಯಾಗೋ ಯಾವುದೇ ಜಾಮೀನು ಅರ್ಜಿಯನ್ನು ಅದರ ಅರ್ಹತೆಯ ಮೇಲೆ ನಿರ್ಧರಿಸಲಾಗುತ್ತದೆ ಎಂದು ಸಹ ಸುಪ್ರೀಂ ಕೋರ್ಟ್ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್ 13ರಂದು, ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ನೀಡಿತ್ತು.2024ರ ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು.
ಜೂನ್ 11ರಂದು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ದರ್ಶನ್ ಅವರನ್ನು ಬಂಧಿಸಲಾಯಿತು. ನಟನ ಗೆಳತಿ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೊದಲು, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು.
ಆದರೆ ಅವರು ಇತರ ಕೈದಿಗಳೊಂದಿಗೆ ಆರಾಮಾಗಿ ವಿಶ್ರಾಂತಿ ಪಡೆಯುತ್ತಿದ್ದ ಫೋಟೋ ವೈರಲ್ ಆದ ನಂತರ, ನಟನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು. ವೈದ್ಯಕೀಯ ಕಾರಣಗಳನ್ನು ಆಧರಿಸಿ ಅಕ್ಟೋಬರ್ 30, 2024ರಂದು ದರ್ಶನ್ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಯಿತು. ನಂತರ, ಡಿಸೆಂಬರ್‌ನಲ್ಲಿ ಹೈಕೋರ್ಟ್ ನಟ ಸೇರಿ ಇತರ ಆರೋಪಿಗಳಿಗೆ ರೆಗ್ಯುಲರ್ ಬೇಲ್ ಮಂಜೂರು ಮಾಡಿತು.

