ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನ್ಯಾಯಾಂಗದ ಪಾತ್ರ ಹಿರಿದು ಎಂದು ಕರ್ನಾಟಕ ಹೈಕೋರ್ಟ್ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ ತಿಳಿಸಿದರು.
ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ಆವರಣದಲ್ಲಿ ದೇಶದ 76 ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಲೋಕ್ ಅದಾಲತ್ ನಿಂದ ತ್ವರಿತಗತಿಯಲ್ಲಿ ಪ್ರಕರಣಗಳು ಇತ್ಯರ್ಥಗೊಳ್ಳುತ್ತಿದೆ.
ಸಾಮಾನ್ಯ ಜನರೂ ಸಹ ಇ–ಸೇವಾ ಕೇಂದ್ರಗಳ ಮೂಲಕ ತಮ್ಮ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯುತ್ತಿದ್ದಾರೆ. ಜನರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಪರಸ್ಪರ ಸಹಕಾರದೊಂದಿಗೆ ಕೆಲಸ ನಿರ್ವಹಿಸುವುದರ ಜೊತೆಗೆ ಪ್ರಕರಣಗಳ ತ್ವರಿತ ಇತ್ಯರ್ಥಕ್ಕಾಗಿ ಹೊಸ ಹೊಸ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಬೇಕೆಂದರು.
ನ್ಯಾಯಾಂಗದ ಘನತೆ ಹೆಚ್ಚಿಸುವ ನಿಟ್ಟಿನಲ್ಲಿ ನಾವುಗಳು ಹೆಚ್ಚು ಜವಾಬ್ದಾರಿ, ಬದ್ಧತೆ ಹಾಗೂ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ನ್ಯಾಯಾಂಗದ ಅಧಿಕಾರಿಗಳು, ವಕೀಲರು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.

