ಪ್ರಾಂಶುಪಾಲರ ಖಾಲಿ ಹುದ್ದೆಗಳ ಭರ್ತಿ-ಸಚಿವ ಡಾ:ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:  
ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದರು.

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ  ವಿಜಯಪುರ ನಗರ ವಿಧಾನಸಭಾ ಸದಸ್ಯ ಬಸನಗೌಡ ಆರ್ ಪಾಟೀಲ್ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ,

ಸರ್ಕಾರಕ್ಕೆ ಸಲ್ಲಿಸಿರುವ ಅಂತಿಮ ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ (ವಿಶೇಷ) ನಿಯಮಗಳು 2020ರ ನಿಯಮ 4ರನ್ವಯ ಕಾಲೇಜು ಶಿಕ್ಷಣ ಆಯುಕ್ತರ ಅಧ್ಯಕ್ಷತೆಯಲ್ಲಿನ ಆಯ್ಕೆ ಪ್ರಾಧಿಕಾರವು ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳ ಶೈಕ್ಷಣಿಕ/ಮೀಸಲಾತಿ ದಾಖಲಾತಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದೆ.

ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿಯಲ್ಲಿ ದಾಖಲಿಸಿದ್ದ ಮಾಹಿತಿಗಳಿಗನುಗುಣವಾಗಿ ವಿದ್ಯಾರ್ಹತೆ, ಮೀಸಲಾತಿ ಮತ್ತಿತರೆ ಅಗತ್ಯ ದೃಢೀಕೃತ ಪ್ರತಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು ಎಂದು ಉತ್ತರಿಸಿದರು.

ಪ್ರಸ್ತುತ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಆಯಾ ಕಾಲೇಜುಗಳ ಉಪನ್ಯಾಸಕರು ಸೇವಾ ಜೇಷ್ಟತೆಯಲ್ಲಿ ಹಿರಿಯರಾದವರನ್ನು ಪ್ರಾಂಶುಪಾಲರ ಪ್ರಭಾರದಲ್ಲಿ ಇರಿಸಲು ಕ್ರಮ ವಹಿಸಲಾಗಿದೆ. ಕಾಲೇಜಿನ ದೈನಂದಿನ ಆಡಳಿತ ನಿರ್ವಹಣೆಗೆ ಯಾವುದೇ ಸಮಸ್ಯೆಯಾಗಿರುವುದಿಲ್ಲ ಎಂದು ತಿಳಿಸಿದರು.

 

- Advertisement -  - Advertisement - 
Share This Article
error: Content is protected !!
";