ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರಾಜ್ಯಾಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ, ಹೊಸದುರ್ಗ ಕ್ಷೇತ್ರದ ಶಾಸಕ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ರಾಜ್ಯಾಧ್ಯಕ್ಷರಾಗಿ ಯಶಸ್ವಿಯಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಲ್ಲದೆ, ಕಳೆದ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನು ಗೆಲುವು ತಂದುಕೊಟ್ಟ ಡಿ.ಕೆ.ಶಿವಕುಮಾರ್‌ರವರನ್ನು ಅಭಿನಂದಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಗೃಹ ಸಚಿವ ಜಿ.ಪರಮೇಶ್ವರ ಸಂದಿಗ್ದ ಸ್ಥಿತಿಯಲ್ಲಿ ಐದು ವರ್ಷಗಳಿಗೂ ಹೆಚ್ಚು ಕಾಲ ಪಕ್ಷವನ್ನು ಕಟ್ಟಿಬೆಳೆಸಿದರು. ತದನಂತರ ಡಿ.ಕೆ.ಶಿವಕುಮಾರ್ ಸಾರಥ್ಯದಲ್ಲಿ ಕಾಂಗ್ರೆಸ್ ಪಕ್ಷ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ೧೩೬ ಸ್ಥಾನಗಳಿಸಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದುಹಾಕಿದೆ. ಡಿ.ಕೆ.ಶಿವಕುಮಾರ್‌ರವರ ಶಿಸ್ತುಬದ್ದ ಸಂಘಟನೆ ಇದಕ್ಕೆ ಕಾರಣವೆಂದರು.
ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಎಐಸಿಸಿಯೂ ಸೇರಿದಂತೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಿರಿಯ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಅಗ್ರಹಗಣ್ಯರು. ಯಾವುದೇ ಸಮಸ್ಯೆ, ಸವಾಲು ಇರಲಿ ಅದನ್ನು ದೈರ್ಯವಾಗಿ ಎದುರಿಸಿ ಪಕ್ಷ ಸಂಘಟಿಸಿದ್ಧಾರೆಂದರು.
ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಶಕ್ತಿ. ಎಂತಹ ಸಂದಿಗ್ದ ಸ್ಥಿತಿಯಲ್ಲೂ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾಣಾಕ್ಷತನ ಅವರಲ್ಲಿದೆ. ಉಪಮುಖ್ಯಮಂತ್ರಿಗಳಾಗಿ, ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಐದು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಎಂದೂ ಹಿಂದೆ ಬಿದ್ದಿಲ್ಲ. ೨೦೨೪ರ ಲೋಕಸಭಾ ಚುನಾವಣೆಯನ್ನು ಬಿಟ್ಟರೆ ಬೇರೆ ಎಲ್ಲಾ ಚುನಾವಣೆಗಳಲ್ಲೂ ಡಿ.ಕೆ.ಶಿವಕುಮಾರ್ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪಕ್ಷದ ಎಲ್ಲಾ ಹಂತದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪರವಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.