ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರ ಸಭೆ” ಆಯೋಜಿಸಿ ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ ಮಾಡಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಹಿಂದುಳಿದ ವರ್ಗಗಳ ಸಮುದಾಯದ ಪ್ರಮುಖರು, ಮಾಜಿ ಸಚಿವರು, ಶಾಸಕರು ಹಾಗೂ ಪದಾಧಿಕಾರಿಗಳ ವಿಶೇಷ ಸಭೆ ನಡೆಸಿ ಜಾತಿ ಗಣತಿ ಕುರಿತು ಚರ್ಚಿಸಲಾಯಿತು ಎಂದು ಅವರು ತಿಳಿಸಿದರು.
ಭಾರತದ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರಥಮ ಬಾರಿಗೆ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ಸೇರ್ಪಡೆಗೊಳಿಸಿ ಹಿಂದುಳಿದ ಸಮುದಾಯಗಳ ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರಗಳ ಸಮೀಕ್ಷೆ ನಡೆಸಲು ಚಾರಿತ್ರಿಕ ಹೆಜ್ಜೆಯಿಟ್ಟಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನಡೆಸಲಿರುವ ಜನಗಣತಿ ಹಾಗೂ ಜಾತಿಗಣತಿಗೆ ಪರ್ಯಾಯವಾಗಿ ರಾಜ್ಯ ಸರ್ಕಾರ ಜಾತಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದು ಅವಿವೇಕತನದ ಪರಮಾವಧಿ ಹಾಗೂ ಜನರ ತೆರಿಗೆ ಹಣವನ್ನು ನೀರಿಗೆ ಚೆಲ್ಲುವ ಮತ್ತೊಂದು ಪ್ರಹಸನ ಎಂದು ವಿಜಯೇಂದ್ರ ಟೀಕಿಸಿದರು.
ಈ ನಿಟ್ಟಿನಲ್ಲಿ ಹಿಂದುಳಿದ ಸಮಾಜಗಳು ಜಾಗೃತಗೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈಗಾಗಲೇ ಕಾಂತರಾಜು ವರದಿಗೆ ತರ್ಪಣ ಬಿಟ್ಟು ಅದಕ್ಕೆ ಖರ್ಚಾದ 165 ಕೋಟಿ ರೂ ವೆಚ್ಚವನ್ನು ನಿರರ್ಥಕ ಗೊಳಿಸಿರುವುದರ ಕುರಿತು ಎಲ್ಲೆಡೆ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಸಭೆಯಲ್ಲಿ ಕರೆ ನೀಡಲಾಯಿತು ಎಂದು ಅಧ್ಯಕ್ಷರು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷರಾದ ಬಿ.ಎ ಬಸವರಾಜ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಪಿ.ಸಿ ಮೋಹನ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನಸಭೆಯ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್, ಪಿ. ರಾಜೀವ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಆರ್.ರಘು ಕೌಟಿಲ್ಯ ಸೇರಿದಂತೆ ಶಾಸಕರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

