ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕುಮಾರಸ್ವಾಮಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಸಂಕಷ್ಟದಲ್ಲಿದ್ದ ಕರ್ನಾಟಕದ ಮಾವು ಬೆಳೆಗಾರ ರೈತರಿಗೆ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಕ್ವಿಂಟಾಲ್ ಗೆ 1616 ರೂ ನಂತೆ ಗರಿಷ್ಠ 2.5 ಮಾವಿಗೆ ಪರಿಹಾರ ಧನ ನೀಡಲು ಅನುಮೋದನೆ ನೀಡುವ ಮೂಲಕ ಮಾವು ಬೆಳೆದ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದರು.
ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

