ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸುವ ಹೊಣೆ ಶಿಕ್ಷಕರದಾಗಿರುತ್ತದೆ ಎಂದು ಹೊಳಲ್ಕೆರೆ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಡಾ.ಹೆಚ್.ಬಿ.ಪ್ರೀತಿ ಹೇಳಿದರು.
ಹೊಳಲ್ಕೆರೆ ತಾಲ್ಲೂಕಿನ ಹನುಮಂತ ದೇವರ ಕಣಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬುಧವಾರ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ, ಹೊಳಲ್ಕೆರೆ ತಾಲ್ಲೂಕು ಬಾಲಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಧುನಿಕ ತಾಂತ್ರಿಕ ಯುಗದಲ್ಲಿ ತಾಂತ್ರಿಕ ಮಾಧ್ಯಮಗಳಿಗೆ ಮಕ್ಕಳು ಅವಲಂಬಿತರಾಗಬಾರದು. ಮಕ್ಕಳು ಬಾಲ್ಯದಲ್ಲೇ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರಲು ಬಹಳ ಅನುಕೂಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ.ಶ್ರೀಕುಮಾರ್ ಮಾತನಾಡಿ, ಮಕ್ಕಳು ಅಂಕಗಳಿಗೆ ಸೀಮಿತರಾಗಿ ಕೌಶಲ್ಯಗಳು ಮತ್ತು ಮೌಲ್ಯಗಳ ಕಲಿಯುವಲ್ಲಿ ಹಿಂದೆ ಸರಿಯುತ್ತಿದ್ದಾರೆ. ಮಾನವೀಯ ಮೌಲ್ಯಗಳು ಮತ್ತು ಕೌಶಲ್ಯಗಳನ್ನು ಕಲಿಸಲು ರಾಜ್ಯ ಬಾಲಭವನವು ಈ ಯೋಜನೆಯ ಮೂಲಕ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಸನ್ಮಾನಿಸುವ ಕೆಲಸ ಮಾಡುತ್ತಿದೆ ಎಂದರು.
ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷರಾದ ಬಿ.ಆರ್.ನಾಯ್ಡು ಅವರು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ವಿವಿಧ ಕೌಶಲ್ಯಗಳನ್ನು ಗುರುತಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಭಾಷಣ, ಪ್ರಬಂಧ, ಗಾಯನ ಸ್ಪರ್ಧೆಯನ್ನು ಆಯೋಜಿಸಿ, ವಿಜೇತ ಮಕ್ಕಳಿಗೆ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕರಾದ ಮಹಾರುದ್ರಯ್ಯ, ಶಿಕ್ಷಕರಾದ ತಿಮ್ಮೇಶ್, ಮೊಹಮದ್ ರಸೂಲ್, ರೇಖಾ ಬಾಯಿ, ಆಶಾರಾಣಿ, ಮನು, ರವಿ, ಕುಮಾರಿ, ಶ್ರೀಧರ್ ಇದ್ದರು.

