ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಐವರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿ ಶಾಕ್ ನೀಡಿದ್ದಾರೆ. ಆದಾಯಕ್ಕಿಂತಲೂ ಅಧಿಕ ಗಳಿಕೆ, ಭ್ರಷ್ಟಾಚಾರದ ಆರೋಪದಡಿ ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ವಿವಿಧೆಡೆ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಶೋಧ ಕಾರ್ಯ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಬಿಬಿಎಂಪಿ ದಾಸರಹಳ್ಳಿ ಉಪವಲಯದ ರೆವಿನ್ಯೂ ಆಫಿಸರ್ ಎನ್. ವೆಂಕಟೇಶ್, ಬೆಂಗಳೂರು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಓಂಪ್ರಕಾಶ್ , ಹಾಸನದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಯಣ್ಣ. ಆರ್, ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಿರಿಯ ಇಂಜಿನಿಯರ್ ಎಂ. ಆಂಜನೇಯಮೂರ್ತಿ ನಿವಾಸದ ಮೇಲೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯಲಹಂಕದ ಮನೆ, ಜಕ್ಕೂರು ಕಾಂಪ್ಲೆಕ್ಸ್, ತುಮಕೂರು, ಮಧುಗಿರಿ ಸೇರಿದಂತೆ ಗೌರಿಬಿದನೂರು ಕಚೇರಿ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಜೆ. ಕೆ. ಆ್ಯಂತೋಣಿ ನೇತೃತ್ವದಲ್ಲಿ ನಾಲ್ಕು ಅಧಿಕಾರಿಗಳ ತಂಡ ಕಾರ್ಯಾಚರಣೆಗೆ ಇಳಿದಿದ್ದು, ಆಸ್ತಿ ಗಳಿಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ಮತ್ತು ವಿಚಾರಣೆ ನಡೆಸುತ್ತಿದ್ದಾರೆ.

