ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸುವ ವಿಚಾರವು ಪಕ್ಷದ ಆಂತರಿಕ ವಿಚಾರವಾಗಿದೆ. ಈ ಬಗ್ಗೆ ಹಚ್ಚಿನ ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸಭಾ ಪರಿಷತ್ನಲ್ಲಿ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲು ಕಾರಣಗಳ ಬಗ್ಗೆ ಸರ್ಕಾರದಿಂದ ಸೂಕ್ತ ಉತ್ತರ ಬಂದಿಲ್ಲ. ಈ ಬಗ್ಗೆ ತಿಳಿಸಬೇಕೆಂದು ಆಗ್ರಹಿಸಿದರು. ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಮತ್ತೆ ಈ ವಿಷಯ ಪ್ರಸ್ತಾಪಿಸುವುದರಲ್ಲಿ ಆರ್ಥವಿಲ್ಲ ಎಂದು ಸಭಾನಾಯಕ ಬೋಸರಾಜು ತಿಳಿಸಿದರು.
ಆಗ ಆಡಳಿತ-ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಈ ವಿಷಯದ ಬಗ್ಗೆ ಸಭಾ ನಾಯಕರು ಉತ್ತರಿಸಿದ್ದಾರೆ. ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದು ರೂಲಿಂಗ್ ನೀಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ಚಾಮಿ, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ಮೂಲಕ ದಲಿತ ನಾಯಕನನ್ನು ತುಳಿದಿದ್ದೀರಿ. ಇದು ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಆರೋಪಿಸಿದರು.
ಆಗ ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದು ನಿಮ್ಮ ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಆಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನು ಯಾಕೆ ಮಾತನಾಡ್ತೀರಾ?
ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ, ಬಸನಗೌಡ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿದಾಗ ಉತ್ತರ ಕೊಟ್ರಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಇದು ಪಕ್ಷದ ಆಂತರಿಕ ವಿಚಾರ ಎಂದು ಹೇಳಿ ಸದನದಿಂದ ನಿರ್ಗಮಿಸಿದರು.

