ಜೀವ ಇರೋತನಕ ಕಾಂಗ್ರೆಸ್ಸಿಗನಾಗಿಯೇ ಇರುವೆ-ಡಿಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನನ್ನ ಜೀವ ಇರೋತನಕ ಕಾಂಗ್ರೆಸ್ಸಿಗನಾಗಿಯೇ ಇರುವೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್ ಮಯ. ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್​ ಪಕ್ಷದಲ್ಲಿದ್ದೇನೆ. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರ ಸ್ತಂಭವಾಗಿ ಕಲ್ಲು ಬಂಡೆಯಂತೆ ನಿಲ್ಲುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ವಿಧಾ‌ನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವು ಬಿಜೆಪಿ ಹಾಗೂ ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಕುರಿತು ಚರ್ಚೆಯಾಗುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ನಾನು ಪರೋಕ್ಷ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಬಿಜೆಪಿ-ಆರ್ ಎಸ್ಎಸ್ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್​​ಎಸ್​​ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ. ವಿಧಾನಸಭೆಯಲ್ಲಿ ಆರ್​​ಎಸ್​​ಎಸ್ ಗೀತೆ ಹಾಡಿದ್ದರ ಪರಿಣಾಮ ನಾನು ಬಿಜೆಪಿ ಪರ ಎನ್ನುವುದು ತಪ್ಪು ಎಂದು ತಿಳಿಸಿದರು.

- Advertisement - 

ಎಲ್ಲ ರಾಜಕೀಯ ಪಕ್ಷಗಳ ಕುರಿತು ನನ್ನದೇ ಆದ ರೀತಿಯಲ್ಲಿ ಸಂಶೋಧನೆ ನಡೆಸಿದ್ದೇನೆ. ಆರ್​​ಎಸ್​​ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್​​ಎಸ್​​ಎಸ್ ಪ್ರತಿ ತಾಲೂಕು, ಜಿಲ್ಲೆ ಸೇರಿದಂತೆ ಎಲ್ಲ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ರಾಜಕೀಯವಾಗಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್​​ಎಸ್​​ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ ಎಂದು ತಿಳಿಸಿದರು.

- Advertisement - 

ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು. ಅದೇ ರೀತಿ ನಾವು ಮಾಡಿದ್ದೇವೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.
ಮಾಧ್ಯಮ ಮಿತ್ರರಲ್ಲೂ ಒಬ್ಬೊಬ್ಬರದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವನ್ನು ನಾವು ಗಮನಿಸಬೇಕಲ್ಲವೇ
? ಎಂದು ಡಿಸಿಎಂ ಪ್ರಶ್ನಿಸಿದರು.

 ಬಿಜೆಪಿ ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಡಿಸಿಎಂ ಹೇಳಿದರು.

ಆರೋಪ ಮಾಡಲಿ:
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಬಗ್ಗೆ ಆರೋಪ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಒದ್ದು ಒಳಗೆ ಹಾಕಲಾಗಿದೆ. ಆರೋಪ ಮಾಡಲು ಆತನ ಬಳಿ ದಾಖಲೆ ಏನಿದೆ? ನಮ್ಮ ನಡುವೆ ರಾಜಕೀಯವಾಗಿ ಸಾಕಷ್ಟು ಭಿನ್ನಾಭಿಪ್ರಾಯಗಳಿರಬಹುದು. ಆದರೆ, ನಮ್ಮ ವಿರೋಧಿಗಳ ಬಗ್ಗೆ ಏನೇನೋ ಮಾತನಾಡುತ್ತಾನೆ ಎಂದು ನಾವು ಖುಷಿಪಡುವುದಲ್ಲ ಎಂದು ತಿಳಿಸಿದರು.

ಆ ವ್ಯಕ್ತಿ ಇಂದು ಅವರ ಬಗ್ಗೆ, ನಾಳೆ ನಮ್ಮ ಬಗ್ಗೆ ಮಾತನಾಡುವುದಿಲ್ಲ ಎನ್ನುವುದು ಏನು ಗ್ಯಾರಂಟಿ ಎಂದು ಪ್ರಶ್ನಿಸಿದ ಡಿಸಿಎಂ ಶಿವಕುಮಾರ್, ಮುಖ್ಯಮಂತ್ರಿಗಳು ಹಾಗೂ ನನ್ನ ವಿರುದ್ಧ ಈ ಹಿಂದೆ ಸುಳ್ಳು ಆರೋಪ ಮಾಡಿದ್ದಾರೆ. ಯಾರ ಸ್ವಾಭಿಮಾನಕ್ಕೂ ಧಕ್ಕೆ ಬರದಂತೆ ಕೆಲಸ ಮಾಡಬೇಕು. ರಾಜಕೀಯ ಮಾಡಲಿ, ರಾಜಕೀಯವಾಗಿ ಆರೋಪಗಳನ್ನು ಮಾಡಲಿ. ಆದರೆ ಆಧಾರಗಳನ್ನಿಟ್ಟುಕೊಂಡು ಆರೋಪ ಮಾಡಲಿ ಎಂದು ತಿಳಿಸಿದರು.

 

 

Share This Article
error: Content is protected !!
";