ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾರ್ವಜನಿಕರು ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ನಗರದ ಕವಾಡಿಗರಹಟ್ಟಿ ನಮ್ಮ ಕ್ಲಿನಿಕ್‍ನಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಡಿ ಸ್ತ್ರೀ ಶಕ್ತಿ ಸಂಘದ ಸದಸ್ಯರು ಮತ್ತು ಸಾರ್ವಜನಿಕರಿಗೆ ಆಯೋಜಿಸಿದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ ಸೇವೆ ನೀಡಲು ಸರ್ಕಾರ ನಮ್ಮ ಕ್ಲಿನಿಕ್‍ಗಳನ್ನು ಪ್ರಾರಂಭಿಸಿರುವುದು ಸಂತಸದ ವಿಷಯ.
ಉಚಿತ ಗುಣಮಟ್ಟದ ಪ್ರಾಥಮಿಕ ಆರೋಗ್ಯ ಸೇವೆಗಳು, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ, ಗರ್ಭಿಣಿಯರು ಮತ್ತು ಶಿಶುಗಳ ಆರೋಗ್ಯ, ಲಸಿಕೆಗಳು ಮತ್ತು ಪ್ರಾಥಮಿಕ ಚಿಕಿತ್ಸಾ ಸೌಲಭ್ಯ ದೊರೆಯಲಿವೆ ಎಂದು ಹೇಳಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ನಗರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಬಡವರು, ದುರ್ಬಲ ವರ್ಗದವರು ತಕ್ಷಣ ಸಣ್ಣಪುಟ್ಟ ಕಾಯಿಲೆಗಳಿಗೆ ಜಿಲ್ಲಾ ಆಸ್ಪತ್ರೆಗೆ ತೆರಳುವುದು ಕಷ್ಟಕರ. ಪ್ರಯುಕ್ತ ನಮ್ಮ ಕ್ಲಿನಿಕ್‍ನಲ್ಲಿ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಜಾಗೃತಿ ಶಿಕ್ಷಣ, ಜೀವನ ಶೈಲಿ ಬದಲಾವಣೆ ಮಾಡಿಕೊಂಡು ಅಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಮತ್ತು ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ನಮ್ಮ ಕ್ಲಿನಿಕ್‍ಗಳು ತುಂಬಾ ಸಹಕಾರಿಯಾಗಿವೆ ಎಂದರು.
ಈ ಸಂದರ್ಭದಲ್ಲಿ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ.ರಕ್ಷಿತಾ, ಶುಶ್ರೂಷಾಧಿಕಾರಿ ದಿವ್ಯಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರವೀಣ್ ಕುಮಾರ್, ನಿತಿನ್, ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮಿ, ಆಶಾ, ಯಶೋಧ ಮತ್ತು ಇತರ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕ ತಾಯಂದಿರು ಹಾಜರಿದ್ದರು.

