ಟೀಕೆ ಇದ್ದರೆ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ, ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಾರೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದ ಸೌಲಭ್ಯ ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೆಂಗಳೂರು ನಡಿಗೆ ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ ಮಾತನಾಡಿದ ಡಿಸಿಎಂ ಶಿವಕುಮಾರ್, ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲ ಮರೆಯಬಾರದು, ಮೂಲ ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದು ಶಿವಕುಮಾರ್ ಟೀಕಿಸಿದರು.
ನಗರದಾದ್ಯಂತ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೋ ತೆಗೆದು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಬೇಸರ ವ್ಯಕ್ತಪಡಿಸಿದರು.
ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ಅವರು ಹೇಳಿದರು.
ಎರಡು ವರ್ಷಗಳಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆಗಳ ಸಮಸ್ಯೆಗಳನ್ನು ನಾವು ತೋರಿಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ಸೂಚ್ಯವಾಗಿ ಹೇಳಿದರು.
ಸುಮಾರು 180 ಜನರು ಇಂದು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. ಶಾಂತಿನಗರ ಹೌಸಿಂಗ್ ಸೊಸೈಟಿ, ಸ್ಯಾನಿಟರಿ ಲೈನ್, ಮಳೆ ನೀರು ಪ್ರವಾಹದಿಂದ ತೊಂದರೆಗೆ ಒಳಗಾದ ಪ್ರದೇಶಗಳ ಸಮಸ್ಯೆಗಳು, ಕೋರಮಂಗಲ ಮೆಟ್ರೋ ಮಾರ್ಗ, ಏರ್ ಪೋರ್ಟ್ಗೆ ನೇರ ಬಸ್ ವ್ಯವಸ್ಥೆ, ಎಸ್ಟಿಪಿ ಅಳವಡಿಕೆ, ಬೆಳ್ಳಂದೂರು ಕೆರೆ ಸಮಸ್ಯೆ, ಪಾದಚಾರಿ ಮಾರ್ಗ, ಸಿಎ ನಿವೇಶನ, ಸಸಿ ನೆಡುವಿಕೆ ಹೀಗೆ ಹಲವಾರು ವಿಚಾರಗಳ ಕುರಿತು ನಾಗರಿಕರು ಗಮನ ಸೆಳೆದಿದ್ದಾರೆ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ತಿಳಿಸಿದರು.
ಸಾರ್ವಜನಿಕರು ನಮಗೆ ಸಹಕಾರ ನೀಡಬೇಕು. ಬೆಂಗಳೂರನ್ನು ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಮಾತ್ರ ಬದಲಾಯಿಸಲು ಆಗುವುದಿಲ್ಲ. ಕಸ ವಿಲೇವಾರಿಯಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಸರ್ಕಾರದ ಜೊತೆ ಕೈ ಜೋಡಿಸಬೇಕು ಎಂದು ಡಿಸಿಎಂ ಮನವಿ ಮಾಡಿದರು.
ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

