ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕøತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಅನಿವಾರ್ಯತೆ ಮತ್ತು ಹೊಸ ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಕುರಿತು ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ. ಕನ್ನಡ ನಾಡಿನ ಇತಿಹಾಸ, ಪರಂಪರೆಗಳ ನೆನಪುಗಳನ್ನು ಹೊಸ ತಲೆಮಾರಿಗೆ ಉಳಿಸಿ ಬೆಳೆಸುವ ಹಾಗೂ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ನಗರದ ಶ್ರೀ ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾವಿರಾರು ವರ್ಷಗಳಷ್ಟು ಹಳೆಯ ಇತಿಹಾಸವುಳ್ಳ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ ಎಂದರು.
ಶಿಕ್ಷಣದಲ್ಲಿ ಕನ್ನಡ ಭಾಷೆಯ ನಿರ್ಲಕ್ಷವು ಹಲವು ಸಮಸ್ಯೆಗಳನ್ನು ಹುಟ್ಟಿ ಹಾಕಿದೆ. ಜಗತ್ತಿನ ಮುಂದುವರೆದ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಇಂದು ಕನ್ನಡದಂಥ ಭಾಷೆಗೆ ಬಂದಿದೆ. ಮುಂದುವರೆದ ದೇಶಗಳ ಮಕ್ಕಳು ತಮ್ಮ ತಾಯಿ ನುಡಿಗಳಲ್ಲಿಯೆ ಯೋಚಿಸುತ್ತಾರೆ, ಕಲಿಯುತ್ತಾರೆ ಮತ್ತು ಕನಸು ಕಾಣುತ್ತಾರೆ.
ಆದರೆ ನಮ್ಮಲ್ಲಿ ಇದಕ್ಕೆ ತದ್ವಿರುದ್ಧವಾದ ಪರಿಸ್ಥಿತಿಯಿದೆ. ಇಂಗ್ಲೀಷು, ಹಿಂದಿಯಂಥ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ಭಾಷೆಯ ಕಾರಣಕ್ಕೆ ದುರ್ಬಲಗೊಳಿಸುತ್ತಿವೆ. ಹಾಗಾಗಿ ಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರಬೇಕಾದ ಅಗತ್ಯವಿದೆ.
ನಮಗಿರುವ ಸವಾಲುಗಳನ್ನೆ ಅವಕಾಶವಾಗಿ ಮಾರ್ಪಡಿಸುವ ಶಕ್ತಿ ನಮ್ಮ ಯುವ ತಲೆಮಾರಿಗಿದೆ. ಯುವ ತಲೆಮಾರು ಎದ್ದು ನಿಂತು ಕನ್ನಡ ಮತ್ತು ಕರ್ನಾಟಕವನ್ನು ಜಗತ್ತಿನ ಮುಂದುವರೆದ ಸಮಾಜಗಳ ಮಟ್ಟಕ್ಕೆ ನಿಲ್ಲಿಸಬೇಕಾಗಿದೆ ಎಂದರು.
ಒಂದು ನಾಡನ್ನು ಕಟ್ಟುವುದು ಸರಳವಾದ ಸಂಗತಿಯಲ್ಲ. ನಾಡೊಂದರ ಸಮಗ್ರ ಅಭಿವೃದ್ಧಿಯೆಂದರೆ ರಸ್ತೆ, ಸೇತುವೆ, ವಿದ್ಯುತ್, ರೈಲು, ವಿಮಾನ, ಸುಸಜ್ಜಿತ ಕಟ್ಟಡಗಳ ಅಲ್ಲ. ಆ ನಾಡಿನ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ, ತಮ್ಮ ಜೊತೆಯಲ್ಲಿನ ಮಕ್ಕಳ ಭಾಷೆ, ಬದುಕು, ಧರ್ಮ, ಜಾತಿ ಹಾಗೂ ಇನ್ನಿತ್ಯಾದಿ ಭಿನ್ನತೆಗಳನ್ನು ಸಹನೆಯಿಂದ ನೋಡುವುದನ್ನು ಕಲಿಸುವುದೂ ಮುಖ್ಯ.
ಜಗತ್ತಿನ ಮುಖ್ಯ ದೇಶಗಳಲ್ಲಿ ನಡೆಯುತ್ತಿರುವ ವಿವಿಧ ರೀತಿಯ ಅನ್ವೇಷಣೆಗಳಿಗೆ ಸರಿಸಾಟಿಯಾಗಿ ನಿಲ್ಲುವಂಥ ರೀತಿಯಲ್ಲಿ ಆಲೋಚನೆಗಳನ್ನು ಕಲಿಸುವ ವಾತಾವರಣವೂ ಬಹಳ ಮುಖ್ಯ.
ಈ ವರ್ಷ ಕನ್ನಡಕ್ಕೆ ಬೂಕರ್ ಪ್ರಶಸ್ತಿಯನ್ನು ಶ್ರೀಮತಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿಯವರು ತಂದುಕೊಡುವ ಮೂಲಕ ನಮ್ಮ ಭಾಷೆಯ ಶಕ್ತಿಯನ್ನು ವಿಶ್ವ ವೇದಿಕೆಗೆ ಕೊಂಡೊಯ್ದಿದ್ದಾರೆ. ಅವರನ್ನೂ ಈ ಸಂದರ್ಭದಲ್ಲಿ ಹೃದಯ ಪೂರ್ವಕವಾಗಿ ಅಭಿನಂದಿಸಿದರು.

