ಇಂಗ್ಲೀಷ್, ಹಿಂದಿ ಭಾಷೆ ಹಾವಳಿಯಿಂದ ಕನ್ನಡ ಭಾಷೆ ರಕ್ಷಿಸಬೇಕು: ಡಿಸಿಎಂ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಂಸ್ಕೃತಿಯ ಬೀಡಾಗಿದ್ದು, ಕನ್ನಡ ಕೇವಲ ನುಡಿಯಲ್ಲ ನಮ್ಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಗರದ ಶ್ರೀ ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲೀಷ್
ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

- Advertisement - 

ಆದಿಕವಿ ಪಂಪ, ಬಸವಣ್ಣ, ಅಲ್ಲಮಪ್ರಭು, ಕನಕದಾಸರು, ಪುರಂದರದಾಸರು, ಕುವೆಂಪು, ಬೇಂದ್ರೆ, ಮಾಸ್ತಿ ಹೀಗೆ ದೊಡ್ಡ ಪರಂಪರೆ ಹೊಂದಿರುವ ನಮ್ಮ ಸಾಹಿತ್ಯವನ್ನು ಇಂದಿನ ಮಕ್ಕಳು ಓದಬೇಕು ಎಂದರು.

ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಈ ನೆಲದಲ್ಲಿ ವೈಶಿಷ್ಟ್ಯ ಅಡಗಿದೆ. ಇಲ್ಲಿಗೆ ಬಂದವರು ಯಾವುದೇ ಕಾರಣಕ್ಕೂ ಮರಳಿ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಿರುವ ನಮ್ಮ ಕರ್ನಾಟಕ ಶಾಂತಿಯಿಂದ ಕೂಡಿದೆ. ಹೊರಗಿನಿಂದ ಬಂದವರು ಸಹ ಊಟ, ವಸತಿ ಗಳಿಸಿಕೊಂಡಿದ್ದಾರೆ. ಇದೇ ನಮ್ಮ ಕನ್ನಡ ತಾಯಿ, ಭೂಮಿಯ ವಿಶೇಷ. ಕರ್ನಾಟಕದಲ್ಲಿರುವ ವಾತಾವರಣ ದೇಶದ ಯಾವ ಭಾಗದಲ್ಲಿಯೂ ಇಲ್ಲ. ನಮ್ಮ ಸಂಸ್ಕøತಿ ಹಾಗೂ ನೆಲ, ಜಲಕ್ಕೆ ಎಲ್ಲರನ್ನೂ ಆಕರ್ಷಿಸುವ ಗುಣವಿದೆ ಎಂದರು.

- Advertisement - 

ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಲು ವಾಣಿಜ್ಯ ಮಳಿಗೆಗಳು, ಅಂಗಡಿಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಸಲು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದರು.

ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವು ಸ್ಮರಿಸಬೇಕು. ಅನೇಕ ಹಿರಿಯರು ಈ ನೆಲ, ಜಲ, ಭಾಷೆ,  ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಯನ್ನೂ  ಸ್ಥಾಪಿಸಿರುವುದು ಹೆಮ್ಮೆಯ ವಿಷಯ ಎಂದರು.

ಕುವೆಂಪು ಅವರು ಹೇಳಿರುವಂತೆ ಕರ್ನಾಟಕ ಶಾಂತಿಯ ತೋಟ. ನಾವೆಲ್ಲರೂ ಜಾತಿ, ಧರ್ಮಗಳನ್ನು ಬಿಟ್ಟು ಸಹಬಾಳ್ವೆಯಿಂದ ಕರ್ನಾಟಕದ ಏಳಿಗೆಗೆ ದುಡಿಯಬೇಕು. ಜಾಗತಿಕವಾಗಿ ಬೆಂಗಳೂರು ಬೆಳೆಯುತ್ತಿದೆ. ಪ್ರಪಂಚದ ಜನರು ಕರ್ನಾಟಕವನ್ನು ಗಮನಿಸುತ್ತಿದ್ದಾರೆ. ಕನ್ನಡ, ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ನಾವೆಲ್ಲರೂ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.

ಶಾಲಾ ಮಕ್ಕಳ ಪಥಸಂಚಲನ ನೋಡುತ್ತಿದ್ದರೆ ತಮ್ಮ ಬಾಲ್ಯದ ದಿನಗಳು ನೆನಪಾಗುತ್ತದೆ ಎಂದ ಅವರು ತಮ್ಮ ಪ್ರೌಢಶಾಲೆಯ ದಿನಗಳ ಮೆಲುಕು ಹಾಕುತ್ತಾ, ಕರ್ನಾಟಕದ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಸ್ವಾಗತಿಸಿದರು ಹಾಗೂ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ವಂದಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಶಾಸಕರಾದ ರಿಜ್ವಾನ್ ಅರ್ಷದ್, ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಬಿ.ಆರ್.ಪಾಟೀಲ್, ಗೋವಿಂದರಾಜು ಹಾಗೂ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷ ಡಾ.ಎಂ.ಎ. ಸಲೀಂ ಮತ್ತಿತರರು ಉಪಸ್ಥಿತರಿದ್ದರು.

 

 

Share This Article
error: Content is protected !!
";