2ನೇ ಬೆಳೆಗೆ ನೀರು ನೀಡದ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ನಿರ್ಧಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಂಗಭದ್ರಾ ಅಚ್ಚುಕಟ್ಟು ರೈತರ ಎರಡನೇ ಬೆಳೆಗೆ ನೀರು ನೀಡದ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ತುಂಗಭದ್ರಾ ಜಲಾನಯನ ಪ್ರದೇಶದ ನಾಲ್ಕು ಜಿಲ್ಲೆಗಳ ರೈತರಿಗೆ ಎರಡನೇ ಬೆಳೆಗೆ ನೀರು ಒದಗಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಚರ್ಚಿಸಲು ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

ಜಲಾಶಯದ ಕ್ರಸ್ಟ್ ಗೇಟ್‌ಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಸರ್ಕಾರವು ಸಮಯೋಚಿತವಾಗಿ ಕೈಗೊಳ್ಳದ ಕಾರಣ, ಇಂದು ರೈತರು ಎರಡನೇ ಬೆಳೆಗೆ ನೀರಿನ ಅಭಾವದಿಂದ ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಅವರು ಆರೋಪಿಸಿದರು.

- Advertisement - 

ಅನ್ನದಾತರ ನೆರವಿಗೆ ಎಂದೂ ಬಾರದ ಈ ರಾಜ್ಯ ಸರ್ಕಾರ, ಅತಿವೃಷ್ಟಿ, ಅನಾವೃಷ್ಟಿ, ಬೆಳೆನಾಶ, ಸಾಲಬಾಧೆ, ಸೇರಿದಂತೆ ರೈತರ ಬಗ್ಗೆ ಕನಿಷ್ಠ ಕಾಳಜಿಯನ್ನೂ ತೋರಿಸಲಿಲ್ಲ. ಈಗ ತುಂಗಭದ್ರಾ ಪ್ರದೇಶದ ರೈತರ ಎರಡನೇ ಬೆಳೆಯ ಈ ಗಂಭೀರ ಸಮಸ್ಯೆಗೂ ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ, ರೈತರ ಹಿತರಕ್ಷಣೆಗಾಗಿ ಹಾಗೂ ಅವರ ಧ್ವನಿಯಾಗಿ ಹೋರಾಟ ರೂಪಿಸಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಹೋರಾಟದ ಮುಂದಿನ ರೂಪರೇಷೆಗಳ ಕುರಿತು ಚರ್ಚಿಸಲಾಯಿತು ಎಂದು ವಿಜಯೇಂದ್ರ ತಿಳಿಸಿದರು.
ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್
, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಸಭೆಯ ಮುಖ್ಯ ಸಚೇತಕ  ದೊಡ್ಡನಗೌಡ ಹೆಚ್. ಪಾಟೀಲ್, ಶಾಸಕರಾದ ಮಾನಪ್ಪ ಡಿ ವಜ್ಜಲ್, ಡಾ.ಶಿವರಾಜ್ ಪಾಟೀಲ್, ಮಾಜಿ ಶಾಸಕರಾದ ಶಿವನಗೌಡ ನಾಯಕ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";