ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡವರ ಸ್ವಾವಲಂಬಿ ಬದುಕಿಗೆ ಆಸರೆಯಾಗಿದ್ದು, ಆರ್ಥಿಕ ಬಲವರ್ಧನೆಗೆ ಕಾರಣವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಆರ್. ಶಿವಣ್ಣ ಅವರು ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪ್ರಚಾರ ಕೈಗೊಳ್ಳುವ ಸಲುವಾಗಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ “ಕಲಾ ಜಾಥಾ” ಸಂಚಾರಿ ಪ್ರದರ್ಶನ ಕಾರ್ಯಕ್ರಮದ ವಿಶೇಷ ವಾಹನಕ್ಕೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಬಳಿಕ ಮಾತನಾಡಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಘನತೆಯಿಂದ ಜೀವನ ಸಾಗಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾದವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂಬ ಆಶಯದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳು ರಾಜ್ಯದ ಜನಸಾಮಾನ್ಯರ ಬದುಕಿನಲ್ಲಿ ಸುಧಾರಣೆ ತಂದಿರುವುದಲ್ಲದೆ, ಆರ್ಥಿಕ ಸಬಲತೆಗೆ ಇಂಬು ನೀಡಿದೆ.
ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಯೋಜನೆಗಳಿಂದ ಜನರಿಗೆ ಉಳಿತಾಯವಾಗುತ್ತಿರುವ ಹಣದಿಂದ ಜನರ ಕೊಳ್ಳುವಿಕೆ ಶಕ್ತಿಗೆ ಹೆಚ್ಚಿನ ಸಾಮಥ್ರ್ಯ ಬಂದಿದೆ. ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಈ ಯೋಜನೆಗಳ ವ್ಯಾಪಕ ಪ್ರಚಾರಕ್ಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ “ಕಲಾ ಜಾಥಾ” ಕಾರ್ಯಕ್ರಮ ಶ್ಲಾಘನೀಯವಾಗಿದ್ದು, ಹೆಚ್ಚು ಹೆಚ್ಚು ಜನರನ್ನು ಗ್ಯಾರಂಟಿ ಯೋಜನೆಗಳು ತಲುಪುವಂತಾಗಲಿ ಎಂದು ಶಿವಣ್ಣ ಅವರು ಆಶಯ ವ್ಯಕ್ತಪಡಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಇಲಾಖೆ ಏರ್ಪಡಿಸಿರುವ “ಕಲಾ ಜಾಥಾ” ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಏರ್ಪಡಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು, ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯೋಜನೆಗಳ ಬಗ್ಗೆ ಗ್ರಾಮೀಣ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಕಲಾಜಾಥಾ ಕಾರ್ಯಕ್ರಮವನ್ನು ಗ್ರಾಮೀಣ ಭಾಗಗಳಲ್ಲಿ ಏರ್ಪಡಿಸಿ, ವ್ಯಾಪಕ ಪ್ರಚಾರ ನೀಡುವಂತಾಗಲಿ ಎಂದರು.
ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಕಲಾಜಾಥಾ ಕಾರ್ಯಕ್ರಮದ ಬಗ್ಗೆ ವಿವರ ನೀಡಿ, ಎಲ್‍ಇಡಿ ಎಲೆಕ್ಟ್ರಾನಿಕ್ ಪರದೆ ಹೊಂದಿರುವ ಕಲಾಜಾಥಾ ವಿಶೇಷ ವಾಹನವು, ಜಿಲ್ಲೆಯ ಆಯ್ದ 20 ಗ್ರಾಮಗಳಲ್ಲಿ ಸಂಚರಿಸಲಿದ್ದು, ಗ್ಯಾರಂಟಿ ಯೋಜನೆಗಳ ಕುರಿತು ವಿಡಿಯೋ ಪ್ರದರ್ಶನ ಹಾಗೂ ಯೋಜನೆಗಳ ಬಗ್ಗೆ ಕಲಾ ತಂಡದಿಂದ ಬೀದಿನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಕಲಾವಿದೆ ಚಂದ್ರಕಲಾ ಅವರ ನೇತೃತ್ವದ ಬೀದಿನಾಟಕ ಕಲಾ ತಂಡವು ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿತು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಸದಸ್ಯರುಗಳಾದ ನಜಾ ತಾಜ್, ಮುದಾಸಿರ್ ನವಾಜ್, ಶಶಿಕಿರಣ್, ನಿತೀಶ್ ಮುಲ್ಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

