ಚಂದ್ರವಳ್ಳಿ ನ್ಯೂಸ್, ಹಾಸನ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚುನಾವಣಾ ಅಕ್ರಮ ಆರೋಪ ಸಂಬಂಧ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.
ಸಿದ್ದರಾಮಯ್ಯ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಗೆಲುವು ಪ್ರಶ್ನಿಸಿ ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿದ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿ ಸದಸ್ಯ ಪೀಠ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರು, ಹಾಸನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, 2023ರಲ್ಲಿ ಆಯ್ಕೆಯಾದ 224 ಶಾಸಕರು ಅನರ್ಹವಾಗುವುದು ಖಚಿತವಾಗಿದೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ಉಚಿತ ಗ್ಯಾರಂಟಿ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗ್ಯಾರಂಟಿ ಘೋಷಣೆಯ ಪ್ರಮುಖ ರೂವಾರಿಗಳಾಗಿದ್ದರು.
ಗ್ಯಾರಂಟಿಗಳನ್ನ ಘೋಷಣೆ ಮಾಡಿ ತೆರಿಗೆ ದುಡ್ಡಲ್ಲಿ ಜನರಿಗೆ ಕೊಡುತ್ತಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ಎಲೆಕ್ಷನ್ ಪಿಟಿಷನ್ ಸಲ್ಲಿಕೆ ಮಾಡಿದ್ದೆವು. ಇದನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಿಯಾದ ಅಂಶಗಳ ಮೇಲೆ ಬೆಳಕು ಚೆಲ್ಲದೇ ನಮ್ಮ ಪಿಟಿಷನ್ ವಜಾ ಮಾಡಿದ್ದರು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಹೋಗಿದ್ದೆವು ಎಂದರು.
ಸುಪ್ರೀಂ ಕೋರ್ಟ್ ವಿಚಾರಣೆ ಮಾಡಿ ಇದರಲ್ಲಿ ಹಲವಾರು ತಪ್ಪುಗಳು, ಲೋಪದೋಷಗಳಿವೆ. ಮುಖ್ಯಮಂತ್ರಿಗಳು ಈ ಪ್ರಕರಣದಲ್ಲಿ ಮಾಡಿರುವುದು ಅಪರಾಧ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಘನ ನ್ಯಾಯಾಲಯದ ನ್ಯಾಯದ ಮುಂದೆ ಯಾವುದೇ ಅಧಿಕಾರ, ಅಂತಸ್ತು ಉಳಿಯುವುದಿಲ್ಲ ಎಂಬುದಕ್ಕೆ ಪ್ರತ್ಯೆಕ್ಷ ಸಾಕ್ಷಿಯಾಗಿದೆ.
ಅತೀ ಶೀಘ್ರದಲ್ಲೇ ಉಚಿತ ಗ್ಯಾರಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ನಂಬಿಕೆಯಿದೆ ಎರಡು ವಾರದಲ್ಲಿ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್‌ಗೆ ಹಾಜರಾಗಬೇಕಿದೆ ಎಂದು ವಕೀಲರು ತಿಳಿಸಿದರು.

