ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಯದರೂರು ಗ್ರಾಮದಲ್ಲಿ 1273ಎಕರೆ ಜಮೀನಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲು ಭೂ-ಸ್ವಾಧೀನಗೊಳಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ವೆಂಕಟಶಿವರೆಡ್ಡಿ ಜಿ.ಕೆ. ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯದರೂರು ಗ್ರಾಮದಲ್ಲಿ 1273 ಎಕರೆ ಜಮೀನಿನಲ್ಲಿ ಕೈಗಾರಿಕಾ ಸ್ಥಾಪನೆ ಮಾಡಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.
ಭೂ-ಸ್ವಾಧೀನಗೊಳಿಸಲು ಸರ್ವೆ ತಪಾಸಕರು ಮತ್ತು ಭೂಮಾಪಕರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭೂ ಮಾಲೀಕರು ಜೆ.ಎಂ.ಸಿ ಕಾರ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಶಾಸಕ ವೆಂಕಟಶಿವಾರೆಡ್ಡಿ ಅವರು ಗ್ರಾಮಸ್ಥರು ಮತ್ತು ಭೂ ಮಾಲೀಕರು ಅಡ್ಡಿಪಡಿಸದಂತೆ ಕ್ರಮ ವಹಿಸಲಾಗುವುದು ಎಂದು ಸದನದಲ್ಲಿ ತಿಳಿಸಿದರು. ಸದನ ಮುಗಿದ ನಂತರ ಮತ್ತೊಮ್ಮೆ ಜೆ.ಎಂ.ಸಿ ಸರ್ವೆ ಕಾರ್ಯಕ್ಕೆ ಸರ್ವೆ ತಪಾಸಕರನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

