ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸೇಡಿನ ರಾಜಕಾರಣದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದ ನೆಪದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ದ್ವೇಷಪೂರಿತ, ಸೇಡಿನ ರಾಜಕಾರಣವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದ ಪಾಟೀಲ್ ತಿಳಿಸಿದ್ದಾರೆ.
ಈ ದ್ವೇಷದ ರಾಜಕಾರಣವು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ವಿರೋಧಪಕ್ಷಗಳ ನಾಯಕರನ್ನು ದಮನಗೊಳಿಸುವ ಉದ್ದೇಶದಿಂದ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಮೋದಿ ಸರ್ಕಾರದ ಅಪಾಯಕಾರಿ ಪ್ರವೃತ್ತಿಯಾಗಿದೆ.
ಈ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಸಮೀಪ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಾಲ್ಗೊಂಡಿದ್ದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಸಚಿವ ಸಂಪುಟದ ಸದಸ್ಯರು, ಶಾಸಕ ಮಿತ್ರರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರದ ದ್ವೇಷಪೂರಿತ ರಾಜಕಾರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

