ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮನೋರಂಜನೆಯೊಂದಿಗೆ ಮನೋವಿಕಾಸಕ್ಕೆ ಬಾಲಭವನ ಸ್ಫೂರ್ತಿ ಎಂದು ಶಿಕ್ಷಕ ಅಜ್ಜಪ್ಪ ಮೋಟಿ ಹೇಳಿದರು.
ಹೊಳಲ್ಕೆರೆ ತಾಲ್ಲೂಕಿನ ಕಾಶಿಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈಚೆಗೆ ರಾಜ್ಯಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ತಾಲೂಕು ಬಾಲ ಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕಲಾ ಪ್ರತಿಭೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಮನೋರಂಜನೆಯೊಂದಿಗೆ ಮನೋವಿಕಾಸದ ಚಟುವಟಿಕೆಗಳನ್ನು ಆಯೋಜಿಸಿ, ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುವ ಚಟುವಟಿಕೆಗಳನ್ನು ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ.ಕುಮಾರ ಮಾತನಾಡಿ, ರಾಜ್ಯ ಬಾಲ ಭವನದ ಅಧ್ಯಕ್ಷ ಬಿ.ಆರ್ ನಾಯ್ಡು ಅವರ ಆಲೋಚನೆಯಂತೆ ಪ್ರತಿಯೊಂದು ಗ್ರಾಮಗಳಲ್ಲಿಯೂ ಮಕ್ಕಳ ಮನೋವಿಕಾಸಕ್ಕೆ ಪೂರಕವಾದ ಚಟುವಟಿಕೆಗಳನ್ನು ಮಾಡಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ಮಾರ್ಗದರ್ಶನದಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯಕುಮಾರ್ ನಿರ್ದೇಶನದಂತೆ ಜಿಲ್ಲೆಯಾದ್ಯಂತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ಬಹುಮಾನ ನೀಡುತ್ತಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಶ್ರೀ ಸಿರಿ ಸಂಪಿಗೆ ಸಂಸ್ಥೆಯ ಕೆ ಪವಿತ್ರ ಅವರು ಮಕ್ಕಳಿಗೆ ಸಂಗೀತದ ಸ್ಪರ್ಧೆ ನಡೆಸಿ ತೀರ್ಪು ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ, ಶಿಕ್ಷಕರಾದ ಚಂದ್ರಪ್ಪ, ನಾಗರಾಜ್, ಗಿರೀಶ್, ಜ್ಯೋತಿ, ಅಸ್ಮ ಪಿರ್ದೋಸ್, ಮಂಜುನಾಥ್ ಇದ್ದರು.

