ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಮಾನ್ಯ ಹೆಸರಿನಲ್ಲಿ ಮರ್ಯಾದಾ ಹತ್ಯೆ ತಡೆಗೆ ಪ್ರತ್ಯೇಕ ಕಾಯ್ದೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು.
ಇಲ್ಲಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮಾನ್ಯ ಪಾಟೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಖುದ್ದು ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರದ 16 ಲಕ್ಷ ರೂ. ಚೆಕ್ ವಿತರಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ 16 ಲಕ್ಷ ರೂ. ಪರಿಹಾರದ ಚೆಕ್ ನೀಡಲಾಗಿದ್ದು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಅವರು ತಿಳಿಸಿದರು.
ಮಾರ್ಯಾದಾ ಹತ್ಯೆ ಅಮಾನವೀಯ ಕೃತ್ಯ, ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ, ಮನು ವಾದದ ಮನಸ್ಸುಗಳನ್ನು ಹತ್ತಿಕ್ಕಬೇಕು. ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾದವರು, ಅದಕ್ಕೆ ಉತ್ತೇಜನ ಕೊಟ್ಟವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕ್ರಮಕ್ಕೆ ಈಗಾಗಲೇ ಸೂಚನೆ ಕೊಡಲಾಗಿದೆ. ಇದು ಮರ್ಯಾದೆ ಹತ್ಯೆ ಮಾತ್ರವಲ್ಲ, ಉಗ್ರವಾದ ಕೊಲೆ, ಇಂತಹ ಘಟನೆಗಳು ನಮ್ಮ ರಾಜ್ಯದಲ್ಲಿ ಹೆಚ್ಚಾಗಿ ನಡೆಯುತ್ತಿರಲಿಲ್ಲ. ರಾಜಸ್ತಾನ ಸೇರಿದಂತೆ ಇನ್ನಿತರ ರಾಜ್ಯದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದವು.
ನಮ್ಮದು ನಾಗರಿಕ ಮತ್ತು ಮುಂದುವರೆದ ರಾಜ್ಯ. ಪ್ರಾಯಕ್ಕೆ ಬಂದ ಯುವಕ, ಯುವತಿಯರು ತಮ್ಮ ಒಪ್ಪಿಗೆ ಮೇರೆಗೆ ಯಾವ ಧರ್ಮ, ಜಾತಿಯವರನ್ನು ಮದುವೆಯಾಗಲು ಮುಕ್ತವಾದ ಅವಕಾಶವಿದೆ. ಅದು ಅವರ ಮೂಲಭೂತ ಹಕ್ಕು, ಇದನ್ನು ಹತ್ತಿಕ್ಕುವ ಕೆಲಸ ಮಾಡಬಾರದು. ಈ ರೀತಿಯಾಗಿ ಕೆಲಸ ಮಾಡಿದ್ರೆ ಅದಕ್ಕೆ ಬೆಂಬಲಿಸುವ ವ್ಯಕ್ತಿಗಳನ್ನು ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವ ಮಹಾದೇವಪ್ಪ ಎಚ್ಚರಿಸಿದರು.
ಇಂತಹ ಮಾರ್ಯಾದೆ ಗೇಡು ಹತ್ಯೆ ತಡೆಗೆ ಉಗ್ರವಾದ ಕಾನೂನು ತರಲು ಮುಂದಿನ ಅಧಿವೇಶನದಲ್ಲಿ ಪ್ರಯತ್ನ ಮಾಡಲಾಗುವುದು. ಮಹಿಳೆಯ ಇಚ್ಛೆಯ ವಿರುದ್ಧವಾಗಿ ವಿವಾಹ ಆಗಬಾರದು ಎಂದು ಅಂಬೇಡ್ಕರ್ ಹೇಳಿದ್ದಾರೆ.
ಅವಳ ಆಸೆಯಂತೆ ಮದುವೆ ಆಗಬೇಕು ಎಂಬುದನ್ನು ಹಿಂದೂ ಕೋಡ್ ಬಿಲ್ ಹೇಳುತ್ತದೆ. ಈ ಘಟನೆಯಲ್ಲಿ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ. ಕೊಲೆ ಮಾಡಿದವರ ವಿರುದ್ಧ ತೀಕ್ಷ್ಣವಾಗಿ ಕ್ರಮ ಕೈಗೊಳ್ಳಲಾಗುವುದು, ಇಂತಹ ಘಟನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಚಿವರು ಎಚ್ಚರಿಸಿದರು.
ಪರಿಶಿಷ್ಟ ಜಾತಿ, ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಘಟನೆ ನಡೆದ ಕೂಡಲೇ ಸಂತ್ರಸ್ತರಿಗೆ ಪರಿಹಾರ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಸೂಚನೆ ಕೊಟ್ಟಿದ್ದೆ. ಈ ಘಟನೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರೇ ಅಂತವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಾನ್ಯ ಪಾಟೀಲ್ ಹೆಸರಿನಲ್ಲಿ ಪ್ರತ್ಯೇಕ ಮಸೂದೆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

