ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಬೆಂಗಳೂರು ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ ಅವರು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿ ಒತ್ತಾಯಿಸಿದರು.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಮಾನ್ಯತೆ ನವೀಕರಣದ ಪ್ರತಿಯನ್ನು ಕಡ್ಡಾಯಗೊಳಿಸದೆ ಎಲ್ಲಾ ವಿದ್ಯಾರ್ಥಿಗಳಿಗೆ ಅದೇ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಲು ಕ್ರಮ ವಹಿಸಬೇಕು ಎಂದು ಅವರು ಮನವಿ ಮಾಡಿದರು.
ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ 2002ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕಾರ್ಯಗಳಿಂದ ಪ್ರೌಢಶಾಲಾ ಶಿಕ್ಷಕರನ್ನು ಕೈಬಿಟ್ಟು, ಬೇರೆ ಇಲಾಖೆಯ ಅಧಿಕಾರಿಗಳಿಂದ ಈ ಕಾರ್ಯವನ್ನು ಮಾಡಿಸಬೇಕೆಂದು ರಮೇಶ್ ಗೌಡ ಮನವಿ ಪತ್ರಗಳನ್ನು ನೀಡಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

