ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಗಿಲು ಬಡಾವಣೆಯ ಸಮೀಪ ಸರ್ಕಾರಿ ಜಾಗ ಒತ್ತುವರಿ ಮಾಡಿ ನಿರ್ಮಿಸಲಾದ ಅಕ್ರಮ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆಗೆ ಮುಂದಾಗಿದ್ದು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಸೀಮ್ ಲೇಔಟ್ ಹಾಗೂ ಫಕೀರ್ ಲೇಔಟ್ನ ಸಂತ್ರಸ್ತರ ಪೈಕಿ ಕೆಲವರು ಬಾಂಗ್ಲಾದೇಶ ಮೂಲದವರಾಗಿರಬಹುದೆಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಜಿಲ್ಲಾಡಳಿತವು ಪುನರ್ವಸತಿ ನೀಡುವ ಮುನ್ನ ಪೊಲೀಸ್ ವೇರಿಫಿಕೇಶನ್ ನಡೆಸಲು ತೀರ್ಮಾನಿಸಿದೆ.
ಈ ಸಂಬಂಧ ಪೊಲೀಸ್ ಇಲಾಖೆಗೆ ಅಧಿಕೃತ ಪತ್ರ ಬರೆಯಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ಅರ್ಜಿ ಸಲ್ಲಿಸಿರುವ ಸಂತ್ರಸ್ತರ ಮೂಲ ಎಲ್ಲಿ ಎಂಬುದನ್ನು ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುತ್ತದೆ ಎನ್ನುವ ಮಾತು ಕೇಳಿ ಬಂದಿದೆ.
ದಾಖಲೆಗಳ ಪರಿಶೀಲನೆ:
ಪೊಲೀಸ್ ವೇರಿಫಿಕೇಶನ್ಗೆ ಮುನ್ನವೇ ಜಿಲ್ಲಾಡಳಿತದಿಂದ ದಾಖಲೆಗಳ ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುತ್ತಿದೆ.
ಅರ್ಜಿದಾರರ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲಾ ಪ್ರಮುಖ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ನಕಲಿ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಬಳಕೆ ಮಾಡಿಕೊಂಡಿರುವ ಸಾಧ್ಯತೆಗಳ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಾನೂನುಬದ್ಧವಾಗಿ ಅರ್ಹರಾದವರಿಗೆ ಮಾತ್ರ ಪುನರ್ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಜಿಲ್ಲಾಡಳಿತ ನೀಡಲಿರುವ ಪರಿಶೀಲನಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋಗಿಲು ಬಡಾವಣೆ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರತಿಪಕ್ಷ ಬಿಜೆಪಿ ನಿಯೋಗ ಕೂಡ, ಸ್ಥಳದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಇರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸೂಕ್ತ ತನಿಖೆಗೆ ಆಗ್ರಹಿಸಿತ್ತು.
ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಬಗ್ಗೆಯೂ ಸಂಶಯ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜೀವ್ ಗಾಂಧಿ ವಸತಿ ಸ್ಕೀಂನ ಆಶ್ರಯ ಯೋಜನೆ ಅಡಿ ಮನೆಗಳನ್ನು ವಿತರಿಸುವುದಕ್ಕೆ ಅಧಿಕಾರಿಗಳಿಗೆ ನಿಯಮಗಳ ತೊಡಕು ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕೋಗಿಲು ಬಡಾವಣೆಯ ನಿವಾಸಿಗಳ ಮೂಲ ಪತ್ತೆ ಮಾಡಲು ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಲಾಗಿದೆ.

