ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಬಿಜೆಪಿ ಮುಖಂಡರೊಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ನಾಗನೂರು ಬಳಿಯ ತೋಟದಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ ಶನಿವಾರ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ.
ಈ ವೇಳೆ ತಮ್ಮ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿರುವ ಮಾಹಿತಿ ದೊರೆತಿದೆ. ಈ ಬೆಳವಣಿಗೆಯಿಂದ ಬೇಸರಗೊಂಡ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದೀಗ ಅಸ್ವಸ್ಥಗೊಂಡ ಮಕ್ಕಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದರಿಂದ ಇಡೀ ದೇಹ ಸುಟ್ಟು ಕರಕಲಾಗಿದೆ. ಹದಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವುದಾಗಿ ಮಾಹಿತಿ ಬಂದ ಮೇರೆಗೆ ಪರಿಶೀಲನೆ ಮಾಡಿದಾಗ ವಿದ್ಯಾನಗರದ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಎಂದು ಗೊತ್ತಾಗಿದೆ.
ವಿದ್ಯಾನಗರದಲ್ಲಿ ವಿಚಾರಣೆ ಮಾಡಿದಾಗ ಮಕ್ಕಳು ಶನಿವಾರ ರಾತ್ರಿ ನಿಮ್ಮ ಜೊತೆ ಮಾತನಾಡಬೇಕು, ಬೇಗ ಬನ್ನಿ ಎಂದು ಚಂದ್ರಶೇಖರ್ಗೆ ಫೋನ್ ಮಾಡಿದ್ದರಂತೆ.
ಚಂದ್ರಶೇಖರ್ ಬರ್ತೀನಿ ಇರಿ ಎಂದು ಹೇಳಿದಾಗ, ಇವರು ಯಾವಾಗಲೂ ಹೀಗೆ ಮಾಡುತ್ತಾರೆ, ಬಂದಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಮನೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಇದೀಗ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಈ ಘಟನೆಯ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತದೆ. ಘಟನಾ ಸ್ಥಳ ಪರಿಶೀಲನೆಗೆ ಎಫ್ಎಸ್ಎಲ್ ತಂಡವನ್ನು ಕರೆಸುತ್ತಿದ್ದೇವೆ. ಸೋಕೋ ತಂಡವರು ಬಂದಿದ್ದಾರೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿಯಲು ತನಿಖೆ ಮಾಡುತ್ತೇವೆ ಎಂದು ಎಸ್ಪಿ ಉಮಾ ತಿಳಿಸಿದರು.

