ಎಸ್.ಎಂ ಕೃಷ್ಣ ಅವರಿಗೆ ಭಾವಪೂರ್ಣ ವಿದಾಯ

News Desk

ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಕರ್ನಾಟಕದ ಮಾಜಿ ಮುಖ್ಯಮಂತ್ರಿ
, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.​ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಿತು.

ಒಕ್ಕಲಿಗ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳ ಬಳಿಕ ಎಸ್ಎಂಕೆ ಅವರ ಮಗಳ ಮಗ ಅಂದರೆ ಮೊಮ್ಮಗ ಅಮರ್ತ್ಯ ಹೆಗ್ಡೆ, ತಮ್ಮ ಅಜ್ಜನ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ರ್ಯಕ್ರಿಯೆ ವಿಧಾನಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಎಸ್​ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನರಾದರು.

ಅಗ್ನಿಸ್ಪರ್ಶಕ್ಕೂ ಮುನ್ನ ಜಿಲ್ಲಾ ಪೊಲೀಸ್‌ಇಲಾಖೆಯಿಂದ ಮೃತರ ಗೌರವಾರ್ಥವಾಗಿ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಮರ್ಪಿಸಿದರು. ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವಪೂರ್ವಕವಾಗಿ ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯಿತು.

ಇದಕ್ಕೂ ಮುನ್ನ ಅಂತ್ಯಕ್ರಿಯೆ ಸ್ಥಳದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿತ್ತು. ಕುಟುಂಬಸ್ಥರೂ ಸೇರಿದಂತೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆದಿಯಾಗಿ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.

- Advertisement -  - Advertisement - 
Share This Article
error: Content is protected !!
";