ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ ಮಾನವ ಸರಪಳಿ

News Desk

ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ ಮಾನವ ಸರಪಳಿ
ಚಂದ್ರವಳ್ಳಿ ನ್ಯೂಸ್, ಶಿರಾ:
ಜಾತಿ, ಮತ, ಧರ್ಮ ಎಂಬ ಯಾವುದೇ ಬೇಧವಿಲ್ಲದೆ ನಾವೆಲ್ಲರೂ ಒಂದೇ ಎನ್ನುವ ಮನೋಭಾವದಿಂದ ಜಿಲ್ಲೆಯ ಜನ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮಾನವ ಸರಪಳಿಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಮಹತ್ವವನ್ನು ಎತ್ತಿಹಿಡಿದಿದ್ದಾರೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಲ್ಲಿಂದು ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ನಿರ್ಮಿಸಲಾಗಿದ್ದ ೯೦ ಕಿಮೀ ಉದ್ದದ ಮಾನವ ಸರಪಳಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,

ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನು ದೇಶದ ಎಲ್ಲಾ ಪ್ರಜೆಗಳಿಗೂ ತಿಳಿಸುವ ಉದ್ದೇಶದಿಂದ ವಿಶ್ವದಲ್ಲಿಯೇ ಮೊದಲ ಬಾರಿಗೆ ಬೀದರ್‌ನಿಂದ ಚಾಮರಾಜನಗರ ಜಿಲ್ಲೆವರೆಗೆ ಸುಮಾರು ೨೫೦೦ ಕಿಮೀ ಉದ್ದದ ಮಾನವ ಸರಪಳಿಯನ್ನು ರಾಜ್ಯದಲ್ಲಿ ವಿಶ್ವ ದಾಖಲೆಯಾಗುವ ರೀತಿಯಲ್ಲಿ ನಿರ್ಮಿಸಲಾಗಿದ್ದು, ಎಲ್ಲ ಜಿಲ್ಲೆಯಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶದ ಯಾವುದೇ ರಾಜ್ಯದಲ್ಲಿ ಇಂಥ ಪ್ರಯತ್ನ ನಡೆದಿಲ್ಲ. ಇಡೀ ದೇಶಕ್ಕೆ ನಮ್ಮ ಪ್ರಯತ್ನ ಮಾದರಿಯಾಗಲಿದೆ ಎಂದು ತಿಳಿಸಿದರು.

ದೇಶದಲ್ಲಿ ದೇಶದ ಪ್ರಜಾ ಪ್ರಭುತ್ವ ವ್ಯವಸ್ಥೆ ಕುರಿತು ಅರಿವು ಮೂಡಿಸಲು ರಾಜ್ಯದಾದ್ಯಂತ ಲಕ್ಷಾಂತರ ಜನರನ್ನು ಒಂದೆಡೆ ಸೇರಿಸಿ ನಿರ್ಮಿಸಿರುವ ಮಾನವ ಸರಪಳಿಯು ಹಬ್ಬದ ವಾತವರಣವನ್ನು ಸೃಷ್ಟಿಸಿದೆ ಎಂದರು.

ಈ ಸಂದರ್ಭದಲ್ಲಿ ದೆಹಲಿಯ ವಿಶೇಷ ಪ್ರತಿನಿಧಿ ಟಿ. ಬಿ.ಜಯಚಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃ?ಪ್ಪ, ಪೋಲಿಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್, ಮಹಾ ನಗರ ಪಾಲಿಕೆ ಆಯುಕ್ತ ಬಿ.ವಿ ಆಶ್ವೀಜ, ಉಪವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

- Advertisement -  - Advertisement - 
Share This Article
error: Content is protected !!
";