ಮುಡಾ ನಿವೇಶನ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆಯನ್ನು 2025ರ ಜನವರಿ 27ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿತು.
ಹೈಕೋರ್ಟ್ ನೀಡಿರುವ ಆದೇಶದಿಂದಾಗಿ ಸಿಬಿಐ ತನಿಖೆಯಿಂದ ಸಿದ್ದರಾಮಯ್ಯ ತಪ್ಪಿಸಿಕೊಂಡಿದ್ದಾರೆ. ಕಾನೂನು ಹೋರಾಟದಲ್ಲಿ ಸ್ವಲ್ಪ ನಿರಾಳರಾದಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

- Advertisement - 

ಲೋಕಾಯುಕ್ತ ಸಂಸ್ಥೆ ಈವರೆಗೂ ನಡೆದಿರುವ ತನಿಖಾ ವರದಿಯನ್ನು ಪರಿಶೀಲಿಸಿದರೆ ಪಕ್ಷಪಾತದಿಂದ ತನಿಖೆ ನಡೆಸಿದೆ ಮತ್ತು ಕಳಪೆಯಿಂದ ಕೂಡಿದೆ ಎಂದು ತೋರುವುದಿಲ್ಲ. ಹೀಗಾಗಿ ಪ್ರಕರಣದ ಮರು ತನಿಖೆ, ಮುಂದುವರಿದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯ ಕಂಡು ಬಂದಿಲ್ಲ. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಲಾಗಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿ ಆದೇಶ ನೀಡಿದೆ.

ಏನಿದು ಪ್ರಕರಣ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್
4643 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ಮುಡಾ ನೀಡಲಾಗಿದೆ. ನಿವೇಶನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಈ ಸಂಬಂಧ ತನಿಖೆ/ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿದಂತೆ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

- Advertisement - 

ರಾಜ್ಯಪಾಲರು ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆ/ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿ ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ತಿರಸ್ಕರಿಸಿ ಸೆ.24ರಂದು ಹೈಕೋರ್ಟ್ ಆದೇಶಿಸಿತ್ತು ಎನ್ನುವುದನ್ನ ಸ್ಮರಿಸಬಹುದಾಗಿದೆ.

ಹೈಕೋರ್ಟ್ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಎಫ್‌ಐಆರ್ ದಾಖಲಾದ ದಿನವೇ ಅಂದರೆ ಸೆ.27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದನ್ನ ಸ್ಮರಿಸಬಹುದಾಗಿದೆ.

 

Share This Article
error: Content is protected !!
";