ಚಂದ್ರವಳ್ಳಿ ನ್ಯೂಸ್, ನೆಲಮಂಗಲ (ಬೆಂ.ಗ್ರಾಮಾಂತರ ಜಿಲ್ಲೆ):
ಎರಡು ಲಾರಿ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಶಿರಾ ಮೂಲದ ತ್ರಿವೇಣಿ (25) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಕುಮಾರ್ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಮಹಿಳೆ ಕುಟುಂಬ ಇಂದು ಬೆಳಗ್ಗೆ ಟಾಟಾ ಏಸ್ ವಾಹನದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದ ವೇಳೆ, ಮುಂಬದಿಯಲ್ಲಿದ್ದ ಲಾರಿ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಟಾಟಾ ಏಸ್ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪರದಾಡಿದ ವಾಹನ ಸವಾರರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದಾಗಿ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರಾಫಿಕ್ ಸಮಸ್ಯೆ ಸುಧಾರಿಸಿದ್ದಾರೆ.