ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದೇ ಬಾಕಿ ಇರುವ ಅರ್ಜಿಗಳಿಗೆ ಆಧಾರ್ ಸೀಡಿಂಗ್ ಮಾಡುವ ಕಾರ್ಯವನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಇದೇ ಆಗಸ್ಟ್ 25 ರಿಂದ ಸೆಪ್ಟೆಂಬರ್ 7 ರವರೆಗೆ ಆಧಾರ್ ಸೀಡಿಂಗ್ ಅಭಿಯಾನ ಕೈಗೊಳ್ಳಲಾಗಿದೆ.
ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಯೋಜನೆಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗಿದ್ದು, ನೇರ ನಗದು ವರ್ಗಾವಣೆ ತಂತ್ರಾಂಶದ ಮೂಲಕ ಅರ್ಹ ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ವಿದ್ಯಾರ್ಥಿ ವೇತನ ಪಾವತಿಸಲಾಗುತ್ತಿದೆ.
ಆಧಾರ್ ಸೀಡಿಂಗ್ ಆಗದೇ ಇರುವ ಕೆಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಿಗೆ ತಾಂತ್ರಿಕ ಅಡೆತಡೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಡಿಸಿಕೊಳ್ಳುವಂತಾಗಲು ಆಗಸ್ಟ್ 25 ರಿಂದ ಸೆಪ್ಟೆಂಬರ್ 7 ರವರೆಗೆ ವಿಶೇಷ ಆಧಾರ್ ಸೀಡಿಂಗ್ ಅಭಿಯಾನವನ್ನು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಹಮ್ಮಿಕೊಳ್ಳುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.
ಈ ಹಿನ್ನಲೆಯಲ್ಲಿ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಆಧಾರ್ ಸೀಡಿಂಗ್ ಮಾಡಿಸಿಕೊಳ್ಳುವಂತಾಗಿಸಲು ವಿಶೇಷ ಆಧಾರ್ ಸೀಡಿಂಗ್ ಅಭಿಯಾನವನ್ನು ಎಲ್ಲ ಶಾಲೆ, ಕಾಲೇಜುಗಳು ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ಆಧಾರ್ ಸೀಡಿಂಗ್ ಮಾಡಿಸಿ, ನಿಗಧಿತ ಸಮಯದೊಳಗೆ ಪೂರ್ಣಗೊಳಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08194-226659 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

