ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಳ್ಳಿಯ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಲು ಆಗ್ರಹಿಸಿ ತಾಲೂಕಿನ ಮಲ್ಲಾಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಉಳಿಸಲು ವಿದ್ಯಾರ್ಥಿಗಳ- ಪೋಷಕರ ಪ್ರತಿಭಟನೆ ಕರಿಯಮ್ಮ ದೇವಾಸ್ಥಾನದ ಹತ್ತಿರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆಯಿತು.
ಎಐಡಿಎಸ್‌ಒ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಆದೇಶದ ಪ್ರಕಾರ ರಾಜ್ಯಾದಂತ 5900 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರವು ನಿರ್ಧರಿಸಿದೆ. ಈ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಲೋಮಿಟರ್‌ವ್ಯಾಪ್ತಿಯಲ್ಲಿ ಬರುವ ಉಳಿದ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದಾಗಿದೆ ಎಂದರು.
ಈಗಾಗಲೇ ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ಪ್ರಕಾರ 17 ಲಕ್ಷ ವಿದ್ಯಾ ರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಯೋಜನೆ ಪ್ರಕಾರ ರಾಜ್ಯದ ಲಕ್ಷಾಂತರ ರೈತ-ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಾದ್ಯಂತ ಈ ಯೋಜನೆ ವಿರುದ್ದ ಜನ ಆಕ್ರೋಶ ವಿದ್ದರೂ, ಕಿಂಚಿತ್ತು ಬೆಲೆ ಇಲ್ಲದೆ ಈ ಭಾಗದ ಜನಗಳ ಅನುಕೂಲಕ್ಕೆ ಇರುವಂತ ಕರ್ನಾಟಕ ಮೈನಿಂಗ್ ಎನ್ವಿರಾನ್ಮೆಂಟ್ ರೀಸ್ಟೋರೇಶನ್ ಕಾರ್ಪೊರೇಷನ್ ನಿಧಿಯನ್ನು ಶಾಲೆಗಳನ್ನು ಮುಚ್ಚಲು ಬಳಸಿಕೊಳ್ಳುತ್ತಿರುವುದು ಅತ್ಯಂತ ಜನ ವಿರೋಧಿ ನೀತಿಯಾಗಿದೆ ಎಂದು ಅವರು ಕಟುವಾಗಿ ಟೀಕಿಸಿದರು.
ರೈತರು, ಕಾರ್ಮಿಕರು, ದಿನಗೂಲಿ ಕೆಲಸ ಮಾಡುವವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈ ಶಾಲೆ ಮುಚ್ಚಿದರೆ ಆ ಮಕ್ಕಳ ಗತಿ ಏನು? ಎಂದು ಪ್ರಶ್ನಿಸಿದರು.
ಮಲ್ಲಾಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆಯಲ್ಲಿ 80ಕ್ಕೂ ಹೆಚ್ಚು ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿಂದ ಪಿಳ್ಳೆಕೇರೆನಹಳ್ಳಿ ಕೆಪಿಎಸ್ ಶಾಲೆಗೆ ವೀಲಿನಗೊಂಡು, ಶಾಲೆ ಮುಚ್ಚುದರೆ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಈ ಕೂಡಲೇ ರಾಜ್ಯ ಸರ್ಕಾರವು ಎಚ್ಚೆತ್ತುಕೊಂಡು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ಮುಚ್ಚುವುದು ಕೈಬಿಡಬೇಕೆಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಸಂಚಾಲಕ ಕೆ.ಈರಣ್ಣ, ಕಾರ್ಮಿಕ ಸಂಘಟನೆ ಮುಖಂಡ ರವಿಕುಮಾರ್, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ.ಬಿ, ಉಪಾಧ್ಯಕ್ಷೆ ಕಾಮಾಕ್ಷಮ್ಮ, ತಿಪ್ಪೇಸ್ವಾಮಿ.ಎಂ, ಕಾರ್ಯದರ್ಶಿ ವಿಶ್ವ ಮೂರ್ತಿ ಮತ್ತು ಊರಿನ ಪೋಷಕರು, ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರು.

