ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾವನ್ನು ಎಐಡಿಎಸ್ಓ ರಾಜ್ಯ ಸಮಿತಿ ಖಂಡನೆ 

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾವನ್ನು ಎಐಡಿಎಸ್ಓ ರಾಜ್ಯ ಸಮಿತಿಯು ತೀವ್ರವಾಗಿ ಖಂಡನೆ

- Advertisement - 

ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ 25 ಲಕ್ಷ ರೂ.ಗಳ ದುಬಾರಿ ಶುಲ್ಕದೊಂದಿಗೆ 15% ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯು ತೀವ್ರವಾಗಿ ಖಂಡಿಸುತ್ತದೆ. ಈ ಕ್ರಮದಿಂದ ವೈದ್ಯಕೀಯ ಕಾಲೇಜುಗಳಿಗೆ ಹಣ ಹರಿದುಬರಲಿದೆ ಎಂದು ಸರ್ಕಾರ ಹೇಳಿಕೊಂಡಿದ್ದರೂ, ವಾಸ್ತವದಲ್ಲಿ ಈ ವಿಧಾನವು ಬಡ- ಮಧ್ಯಮವರ್ಗದ ವಿದ್ಯಾರ್ಥಿಗಳ ಪಾಲಿಗೆ ಅಮೂಲ್ಯವಾದ ಸರ್ಕಾರಿ ಸೀಟುಗಳನ್ನು ಶ್ರೀಮಂತರಿಗೆ ಹರಾಜು ಹಾಕುವ ಮತ್ತು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣದತ್ತ ತಳ್ಳುವ ಪ್ರಯತ್ನವಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಯಾವುದೇ ಆರ್ಥಿಕ ಹಿನ್ನಲೆಯನ್ನು ಲೆಕ್ಕಿಸದೆ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸುವ ಉದ್ದೇಶದೊಂದಿಗೆ ಸ್ಥಾಪಿಸಲಾಗಿದೆ. ಶ್ರೀಮಂತ ಎನ್‌ಆರ್‌ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ಸರ್ಕಾರವು
ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶದ ಬಾಗಿಲು ಮುಚ್ಚುತ್ತಿದೆ. ಈಗಾಗಲೇ, ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕವು ದೇಶದಲ್ಲಿಯೇ ಅತಿ ಹೆಚ್ಚಿದ್ದು, ಪಶ್ಚಿಮ ಬಂಗಾಳ ಮತ್ತು ಉತ್ತರ ಭಾರತದ ಹಲವು ರಾಜ್ಯಗಳ ಶುಲ್ಕಕ್ಕಿಂತ ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ. ಈ ಅನ್ಯಾಯದ ಹೊರೆಯನ್ನು ಕಡಿಮೆ ಮಾಡುವ ಬದಲು, ಸರ್ಕಾರವು ವಿದ್ಯಾರ್ಥಿಗಳಿಂದ ಇನ್ನಷ್ಟು ಹಣವನ್ನು ವಸೂಲಿ ಮಾಡಲು ನಿರ್ಲಜ್ಜವಾಗಿ ಪ್ರಯತ್ನಿಸುತ್ತಿದೆ. ಈ ಕ್ರಮವು ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ಮತ್ತು ಜನವಿರೋಧಿ ಮನೋಭಾವವನ್ನು ಬಟಾಬಯಲಾಗಿಸಿದೆ.

- Advertisement - 

ವೈದ್ಯಕೀಯ ಕಾಲೇಜುಗಳನ್ನು ಬಲಪಡಿಸಲು ರಾಜ್ಯದ ಬೊಕ್ಕಸದಿಂದ ಅವಶ್ಯಕ ಹಣವನ್ನು ಮಂಜೂರು ಮಾಡುವ ಬದಲು, ಸರ್ಕಾರವು ನಾಚಿಕೆಯಿಲ್ಲದೆ ಈ ಹೊರೆಯನ್ನು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಮೇಲೆ ವರ್ಗಾಯಿಸುತ್ತಿದೆ. ಇಂತಹ ನೀತಿಗಳು ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುತ್ತಾ, ಸಂಪೂರ್ಣ ಖಾಸಗೀಕರಣಕ್ಕೆ ಎಡೆ ಮಾಡಿಕೊಡುತ್ತವೆ!

ಕರ್ನಾಟಕದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ಈ ಸಂಧರ್ಭದಲ್ಲಿ , ಸರ್ಕಾರವು ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯವನ್ನು ಖಾತ್ರಿಪಡಿಸಲು ಆದ್ಯತೆ ನೀಡಬೇಕಿರುವುದು ಅತ್ಯಗತ್ಯವಾಗಿದೆ. ಸಂಪನ್ಮೂಲ ಕ್ರೋಢೀಕರಣದ ನೆಪದಲ್ಲಿ ಶ್ರೀಮಂತರಿಗೆ ಸೀಟುಗಳನ್ನು ಮಾರಾಟ ಮಾಡುವುದಲ್ಲ.

ಈ ನಿರ್ಧಾರವು ಸರ್ಕಾರಿ ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಂತೆ ಲಾಭಗಳಿಸುವ ಕೇಂದ್ರಗಳಾಗಿ ಪರಿವರ್ತಿಸುವ ಅಪಾಯಕಾರಿ ಹೆಜ್ಜೆಯಾಗಿದೆ ಎಂದು ಎಐಡಿಎಸ್ಒ ಎಚ್ಚರಿಸುತ್ತದೆ.

*ಸೆಪ್ಟೆಂಬರ್ 10 – ರಾಜ್ಯವ್ಯಾಪಿ ಪ್ರತಿಭಟನಾ ದಿನ* ಸರ್ಕಾರದ ಈ ವಿದ್ಯಾರ್ಥಿ ವಿರೋಧಿ, ಜನವಿರೋಧಿ ಕ್ರಮವನ್ನು ಪ್ರತಿಭಟಿಸಲು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಎಲ್ಲಾ ಪ್ರಜಾತಾಂತ್ರಿಕ ಆಶಯವುಳ್ಳ ಜನತೆ ಒಗ್ಗೂಡಬೇಕೆಂದು ಎಐಡಿಎಸ್ಓ ಕರೆ ನೀಡಿದೆ. ಸೆಪ್ಟೆಂಬರ್ 10 ರಂದು, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಮೇಲೆ ನೇರ ದಾಳಿಯಾದ ಈ ಕಠಿಣ ನೀತಿಯ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನಾ ದಿನಕ್ಕೆ ಕರೆ ನೀಡಲಾಗಿದೆ.

Share This Article
error: Content is protected !!
";