ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ದೃಷ್ಟಿಯಿಂದ ವಿಜಯಪುರ ಜಿಲ್ಲೆಯಲ್ಲಿ ರೂ.347 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಇದೇ ಸಾಲಿನಲ್ಲಿ ಮುಕ್ತಾಯಗೊಳಿಸಿ ಪ್ರಯಾಣಿಕರಿಗೆ ಸಜ್ಜುಗೊಳಿಸಲಾಗುತ್ತಿದೆ.
ಮೈಸೂರು ವಿಮಾನ ನಿಲ್ದಾಣ ರನ್‍ವೇ ವಿಸ್ತರಣೆಯನ್ನು ರೂ.319 ಕೋಟಿ ವೆಚ್ಚದಲ್ಲಿ, ರಾಯಚೂರು ವಿಮಾನ ನಿಲ್ದಾಣವನ್ನು ರೂ.219 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಕ್ರಮಕೈಗೊಂಡಿದೆ. ರಾಜ್ಯದ ಧರ್ಮಸ್ಥಳ, ಮಡಿಕೇರಿ ಮತ್ತು ಚಿಕ್ಕಮಗಳೂರಿನಲ್ಲಿ ಏರ್‍ಸ್ಟ್ರಿಪ್‍ಗಳನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಗುರುತಿಸುವ ಮತ್ತು ಭೂಸ್ವಾಧೀನ ಪ್ರಕ್ರಿಯೆ ನಡೆಸುವ ಕೆಲಸ ಮಾಡುತ್ತಿದೆ.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 407 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಬೆಂಗಳೂರು ಸಿಗ್ನೇಚರ್ ಬ್ಯುಸಿನೆಸ್ ಪಾರ್ಕನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ಕಾರವಾರ ನೌಕಾನೆಲೆ ಬಳಿಯ ವಿಮಾನ ನಿಲ್ದಾಣದ ಕಾಮಗಾರಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.