ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಪೌರಕಾರ್ಮಿಕರಿಗೆ ಬೆಳಗಿನ ಉಪಹಾರವನ್ನು ಸ್ವಚ್ಛವಿರದ ಗೋಣಿ ಚೀಲದಲ್ಲಿ ತುಂಬಿ ತಂದು ನೀಡುತ್ತಾರೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ, ಆದರೂ ಸಂಬಂಧಪಟ್ಟ ಅಧಿಕಾರಿಯ ಮೇಲೆ ಕ್ರಮ ಕೈಗೊಂಡಿಲ್ಲ.
ಚಿತ್ರದುರ್ಗ ನಗರದಲ್ಲಿ ಮುಂಜಾನೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಪೌರಕಾರ್ಮಿಕ ಮಹಿಳೆಯ ಮೇಲೆ ಆಟೋಚಾಲಕ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾನೆ. ಇಂತಹ ಘಟನೆಗಳು ಮರುಕಳಿಸದಂತೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪುರ್ನವಸತಿ ಸಮಿತಿ ಸದಸ್ಯ ಮಂಜಣ್ಣ ಆಗ್ರಹಿಸಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಮಿಕರು ಇಲ್ಲಾ ಎಂದು ವರದಿ ನೀಡಲಾಗಿದೆ. ಆದರೆ ನಗರಸಭೆ ಹೊರತು ಪಡಿಸಿ, ಜಿಲ್ಲೆಯ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಸಕ್ಕಿಂಗ್ ಮಿಷನ್‌ಗಳು ಇಲ್ಲ.
ಜಿಲ್ಲೆಯಲ್ಲಿ ಕೈಯಿಂದ ಮಲಗುಂಡಿಗಳನ್ನು ಸ್ವಚ್ಛಗೊಳಿಸುವವರು ಇದ್ದಾರೆ. ಈ ಬಗ್ಗೆ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಯೋಜನೆಯಡಿ ಪೌರ ಕಾರ್ಮಿಕರಿಗೆ ಯೋಜನೆ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅಧ್ಯಕ್ಷರಲ್ಲಿ ಮಂಜಣ್ಣ ಕೋರಿದರು.

