ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದಲ್ಲಿ ಹೈಡ್ರೋಪೋನಿಕ್ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಸೆರೆ ಹಿಡಿದಿದ್ದಾರೆ.
ನಗರದಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಜಿಜೋ ಪ್ರಸಾದ್(25) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿ ಕೇರಳದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದು ಈತನಿಂದ 3 ಕೆ.ಜಿ 554 ಗ್ರಾಂ ಹೈಡ್ರೋಪೋನಿಕ್ ಗಾಂಜಾ, 26.06 ಲಕ್ಷ ನಗದು ಮತ್ತು ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಸ್ನೇಹಿತ ಪರಾರಿಯಾಗಿದ್ದು ಹುಡುಕಾಟ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೊಮ್ಮಸಂದ್ರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಿದ್ದ ಆರೋಪಿ, ಕೇರಳದಿಂದ ಹೈಡ್ರೋಪೋನಿಕ್ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ ಬೆಂಗಳೂರಿಗೆ ತರುತ್ತಿದ್ದ.
ಬೆಂಗಳೂರಿನಲ್ಲಿ ಸ್ನೇಹಿತನೊಂದಿಗೆ ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ ಮುಂತಾದ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದರು. ಮಾದಕ ಪದಾರ್ಥಗಳ ಮಾರಾಟದ ಬಗ್ಗೆ ಯಾರಿಗೂ ಅನುಮಾನ ಬಾರದಿರಲು ಡಬಲ್ ಲೇಯರ್ ಏರ್‌ಟೈಟ್ ಪ್ಲಾಸ್ಟಿಕ್ ಕವರ್‌ಗಳಲ್ಲಿ 100 ಗ್ರಾಂನಂತೆ ಸಣ್ಣ ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ, ಬ್ಯಾಗ್‌ನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಒಂದು ಗ್ರಾಂ ಗಾಜಾಗೆ 12 ಸಾವಿರ ರೂಪಾಯಿ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.