ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಿಗೆ! ಬಂದಿದೆ ಎಂದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಣವನ್ನ ತೆಲಂಗಾಣ ಚುನಾವಣೆಗೆ, ಲೋಕಸಭೆ ಚುನಾವಣೆಗೆ ಬಳಸಿಕೊಂಡು ನುಂಗಿ ನೀರು ಕುಡಿದಿದ್ದಾಯ್ತು.
ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು.
ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಲಿಯಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ.
ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಸಹಾಯಧನ ಬಿಡುಗಡೆ ಮಾಡಲು 5 ಲಕ್ಷ ಕಮಿಷನ್ ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಕಮಿಷನ್ ದಂಧೆ, ಲಂಚಗುಳಿತನ, ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಿದ್ದಾರೆ ಎಂದು ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರವನ್ನ ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂಬಂತೆ SCSP/TSP ಹಣದ ದುರ್ಬಳಕೆ ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಈಗ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆಯುತ್ತಿರುವ ಅಕ್ರಮ ಸಾಕ್ಷಿ ಸಮೇತ ಬಹಿರಂಗವಾಗಿದೆ.
ಇಷ್ಟಾದರೂ ತಾವು ಕುರ್ಚಿಗೆ ಅಂಟಿಕೊಂಡು ಕೂರುತ್ತೀರಿ ಎಂದರೆ ನಿಮ್ಮ ಭಂಡತನಕ್ಕೆ ನೀವೇ ಸಾಟಿ. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಇದ್ದರೆ ತಾವು ಇನ್ನೊಂದು ಕ್ಷಣವೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಅಶೋಕ್ ತಾಕೀತು ಮಾಡಿದ್ದಾರೆ.

