ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2025-26ನೇ ಸಾಲಿಗೆ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆಗಳಿಗೆ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ.
ಪ್ರಕರಣವು 2024 ಆಗಸ್ಟ್ 1 ರಿಂದ 2025ರ ಜುಲೈ 31ರ ಅವಧಿಯಲ್ಲಿ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದವರಿಗೆ ತಲಾ 10 ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಮಕ್ಕಳ ದಿನಾಚರಣೆ-2025ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಹ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

