ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ ಆಶಾ ಕಾರ್ಯಕರ್ತೆಯರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಆಶಾ ಕಾರ್ಯಕರ್ತೆಯರು ನಿಗದಿತ ವೇತನ
, ಪ್ರೋತ್ಸಾಹ ಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ‌.

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದಲ್ಲಿರುವ 42,000 ಜನ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹಲವು ವರ್ಷಗಳಿಂದ ಈಡೇರಿಲ್ಲ. ಆದ್ದರಿಂದ ಕೆಲಸ ಸ್ಥಗಿತಗೊಳಿಸಿ ಧರಣಿಗೆ ನಿರ್ಧರಿಸಿದ್ದೇವೆ ಎಂದು ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೇಡಿಕೆಗಳು-
ಆಶಾ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಗೌರವಧನ ನೀಡಬೇಕು. ನಗರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸ ಹಾಗೂ ನಗರದ ದುಬಾರಿ ಜೀವನ ವೆಚ್ಚಗಳಿಗೆ ಅನುಗುಣವಾಗಿ 20 ಸಾವಿರ ರೂ. ಗೌರವಧನ ಹೆಚ್ಚಿಸಬೇಕು.
ಆಶಾ ಕಾರ್ಯಕರ್ತೆಯರು 8 ವರ್ಷಗಳಿಂದಲೂ ಮಾಡುತ್ತಿರುವ ಕೆಲಸಗಳು ಆಶಾ ನಿಧಿ ಪೋರ್ಟಲ್‌ನಲ್ಲಿ ದಾಖಲಾಗುತ್ತಿಲ್ಲ.

ರಾಜ್ಯಾದ್ಯಂತ ಬಾಕಿ ಇರುವ 3 ತಿಂಗಳ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಹಿಸಿರುವ ಮೊಬೈಲ್ ಆಧಾರಿತ ಕೆಲಸಗಳನ್ನ ಒತ್ತಾಯಪೂರ್ವಕವಾಗಿ ಮಾಡಿಸಿಕೊಳ್ಳಬಾರದು. ಇಲ್ಲದಿದ್ದರೆ ಮೊಬೈಲ್‌ಆಧಾರಿತ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಪಶ್ಚಿಮ ಬಂಗಾಳ ರಾಜ್ಯದ ಮಾದರಿಯಲ್ಲಿ ಸೇವಾ ನಿವೃತ್ತಿ ಪಡೆಯುವ ಆಶಾ ಕಾರ್ಯಕರ್ತೆಯರಿಗೆ ರೂ.5 ಲಕ್ಷ ನೀಡಬೇಕು.
ಪ್ರತಿವರ್ಷ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ ಕಲ್ಪಿಸಬೇಕು. ಆಶಾ ಕಾರ್ಯಕರ್ತೆಯರನ್ನ ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ
, ಭವಿಷ್ಯನಿಧಿ, ಕಾರ್ಮಿಕರ ರಾಜ್ಯ ವಿಮೆ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾ ನಿರತ ಆಶಾ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಈಡೇರಿಸಿಲ್ಲ: ಆಶಾ ಯುನಿಯೂನ್​ ರಾಜ್ಯ ಉಪಾಧ್ಯಕ್ಷ ಡಾ. ಪ್ರಮೋದ್​ ಮಾತನಾಡಿ, ಕಳೆದ ಫೆಬ್ರವರಿಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಇದೇ ರೀತಿ ಪ್ರತಿಭಟನೆ ನಡೆಸಲಾಗಿತ್ತು. ಆಗ ಸಿಎಂ ಸಿದ್ದರಾಮಯ್ಯ ಅವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು.

8 ರಿಂದ 9 ತಿಂಗಳು ಕಾದರೂ ಏನೂ ಬದಲಾವಣೆ ಆಗಿಲ್ಲ. 15 ಮೀಟಿಂಗ್​ಗಳು ನಡೆದಿದ್ದರೂ, ಏನೂ ಪ್ರಯೋಜನ ಕೂಡ ಆಗಿಲ್ಲ. ಅನಿವಾರ್ಯವಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಬಂದಿದ್ದೇವೆ. ಸರ್ಕಾರದಿಂದ ನಮಗೆ ಸೂಕ್ತ ಭರವಸೆ ಸಿಗುವವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಆಶಾ ಕಾರ್ಯಕರ್ತೆಯರು ಹೇಳಿದರು.

- Advertisement -  - Advertisement - 
Share This Article
error: Content is protected !!
";