ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಮೊಗ್ಗದ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಮತಾಂಧ ಪುಂಡರು ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸಂಕೇತ್ ನನ್ನು ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ “ಬ್ರದರ್ಸ್” ಗಳಿಗೆ ಯಾವ ಮಟ್ಟದ ಸದರ ಕೊಟ್ಟಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟದ ಕನಸು ಕಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ತವರು ಜಿಲ್ಲೆ ಇವತ್ತು ಮತಾಂಧತೆಯ ಮಸಣವಾಗಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣವೇ ನೇರ ಕಾರಣ ಎಂದು ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.

