ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ದೂರಿದರು.
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ವಿಪಕ್ಷ ನಾಯಕ ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ಕರ್ನಾಟಕ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ.
ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯ ನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಕೂಡಲೇ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.