ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ.15 ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಡಿಕೆ ಶಿವಕುಮಾರ್ ಅವರಿಗೆ ಆರ್.ಅಶೋಕ್ ಚಿಚ್ಚಿದ್ದಾರೆ.