ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಂಪೇಗೌಡರು ಕಟ್ಟಿದ ಬೆಂಗಳೂರು ನಾಡನ್ನು ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಪೀಸ್ ಪೀಸ್ ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬಜೆಟ್ ಅಧಿವೇಶನ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗುತ್ತಿದ್ದು ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ರಾತ್ರಿ ಅವರು ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಭೆ ಸೇರಿ ಮಹತ್ವ ಚರ್ಚೆ ಮಾಡಿದ್ದಾರೆ.
ಬಿಜೆಪಿ-ಜೆಡಿಎಸ್ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಕೆಂಪೇಗೌಡರು ಕಟ್ಟಿದ ನಾಡನ್ನು ಏಳು ಪೀಸ್ ಮಾಡಲು ಹೊರಟಿದ್ದಾರೆ. ಬೆಂಗಳೂರು ವಿಭಜನೆ ಮಾಡಲು ಆಡಳಿತ ರೂಢರು ಯಾವ ರೀತಿ ಬಿಲ್ ಮಂಡಿಸುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಕುಮಾರಸ್ವಾಮಿ ತಿಳಿಸಿದರು.
ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಈ ಎರಡು ಪಕ್ಷಗಳ ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಲ್ಲರೂ ಜೊತೆಗೂಡಿ ಸಭೆ ನಡೆಸಿದ್ದು ವಿಧಾನಸಭಾ ಬಜೆಟ್ ಅಧಿವೇಶನದ ಬಗ್ಗೆ ಚರ್ಚಿಸಲಾಗಿದೆ. ಬಜೆಟ್ ನಂತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಮತ್ತೆ ಮತ್ತೆ ತಲೆ ಬೆಳಕಿಗೆ ಬರುತ್ತಿರುವ ಕೆಪಿಎಸ್ಸಿ ಅಕ್ರಮಗಳು, ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಚ್ಚುತ್ತಿರುವ ಸಾಲಗಾರರ ಸಾವುಗಳು, ಅಮಾಯಕ ಬಾಣಂತಿಯರ ಸಾವುಗಳು, ರೈತರು ಸಂಕಷ್ಟಕ್ಕೆ ಒಳಗಾಗಿದ್ದರೂ ಪರಿಹಾರ ಸಿಗದಿರುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಭ್ರಷ್ಟ ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಅಭಿವೃದ್ದಿ ಸಂಪೂರ್ಣ ಕುಂಠಿತ ಆಗಿದೆ. ಮೆಟ್ರೋ ದರ ಹೆಚ್ಚಳ, ನೋಂದಣಿ ಶುಲ್ಕಗಳ ಹೆಚ್ಚಳ, ಬಸ್, ಹಾಲು, ವಿದ್ಯುತ್ ದರ ಹೆಚ್ಚಳ, ರೈತರ ಆತ್ಮಹತ್ಯೆಗಳು, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗಿದ್ದು ಬಜೆಟ್ ಅಧಿವೇಶನದಲ್ಲಿ ಎರಡೂ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಲಿವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಸಿಎಂ ಭೇಟಿ:
ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಇದೇ ತಿಂಗಳ ಫೆಬ್ರವರಿ 28 ರಂದು ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ತಿಳಿಸಿದರು.
ಮುಂಬರುವ ಬಜೆಟ್‍ಮಂಡನೆಯಲ್ಲಿ ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ ಎಂದು ಹೇಳಿದರು.
ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದ್ದು, ಅದರ ಬಗ್ಗೆಯೂ ಚರ್ಚೆ ಆಗಿದೆ ಎಂದು ವಿಜಯೇಂದ್ರ ತಿಳಿಸಿದರು.
ಶೀಘ್ರ ಬಿಬಿಎಂಪಿ ಚುನಾವಣೆ ನಡೆಸಬೇಕು. ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈಬಿಡಬೇಕು. ಟನೆಲ್ ರಸ್ತೆ ಯೋಜನೆ ಕೈಬಿಟ್ಟು, ಬೆಂಗಳೂರು ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರ್ಕಾರ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ವಿಜಯೇಂದ್ರ ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದೆ. ಬೆಂಗಳೂರು ನಗರದಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಸರ್ಕಾರಕ್ಕೆ ಆಗುತ್ತಿಲ್ಲ. ಆದರೆ, ಟನೆಲ್ ರಸ್ತೆ ಕುರಿತು ಸರ್ಕಾರದವರು ಮಾತನಾಡುತ್ತಿದ್ದಾರೆ. ಅದರ ಬದಲಿಗೆ ಮೆಟ್ರೋ ಬೋಗಿಗಳನ್ನು ಹೆಚ್ಚಿಸಲಿ. ಟ್ರಾಫಿಕ್ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಬದಲಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಿ. ಅವೈಜ್ಞಾನಿಕ ಟನೆಲ್ ರಸ್ತೆ ಯೋಜನೆ ಕೈಬಿಡಬೇಕು ಎಂಬ ಕುರಿತು ಸಮಗ್ರ ಚರ್ಚೆ ಆಗಿದೆ ಎಂದು ವಿಜಯೇಂದ್ರ ಹೇಳಿದರು.
ಇ-ಖಾತಾ ಸಮಸ್ಯೆ: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಇ-ಖಾತಾದಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಗ್ರೇಟರ್ ಬೆಂಗಳೂರು ಎಂಬ ಕಥೆ ಹೇಳಿಕೊಂಡು ಬಿಬಿಎಂಪಿ ಚುನಾವಣೆ ಮುಂದೂಡುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಉದ್ಧಾರದ ಕಥೆ ಹೇಳುತ್ತ ಚುನಾವಣೆ ಮುಂದೂಡುವ ಪ್ರಯತ್ನ ಮಾಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಚುನಾವಣೆ ಮುಂದೂಡಿಕೆಗೆ ಅವಕಾಶ ಕೊಡಬಾರದು. ತಕ್ಷಣವೇ ಬಿಬಿಎಂಪಿ ಚುನಾವಣೆ ನಡೆಸಬೇಕು. ಈ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಅವರು ಹೇಳಿದರು.
ಮೆಟ್ರೋ ದರ ಕೇಂದ್ರ ಹೆಚ್ಚಿಸಿಲ್ಲ:
ಮೆಟ್ರೋ ದರವನ್ನು ಕೇಂದ್ರ ಸರ್ಕಾರವೇ ಏರಿಕೆ ಮಾಡಿದೆ ಎಂದು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ವಿಜಯೇಂದ್ರ ದೂರಿದರು.
ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ, ರವಿ ಸುಬ್ರಮಣ್ಯ, ಬೈರತಿ ಬಸವರಾಜ್, ಉದಯ ಗರುಡಾಚಾರ್, ಬೆಂಗಳೂರಿನ ಮೂರು ಜನ ಜಿಲ್ಲಾಧ್ಯಕ್ಷರು, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಇದ್ದರು.