ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
2024-25ನೇ ಸಾಲಿನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ) ಸಂಸ್ಥೆಗಳ ಮೂಲಕ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಅರ್ಟಿಫಿಸಿಯಲ್ ಇಂಟೆಲಿಜೆನ್ಸಿ ಮತ್ತು ಮೆಷಿನ್ ಲರ್ನಿಂಗ್) ಕೋರ್ಸ್ಗಳಲ್ಲಿ ಭಾಗವಹಿಸುವ 200 ಇಂಜಿನಿಯರಿಂಗ್ ಎಸ್ಟಿ ಪದವಿಧರರಿಗೆ ರೂ.15000 ಶಿಷ್ಯವೇತನ ಹಾಗೂ ತರಬೇತಿ ನೀಡಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೊಹಿದ್ಧೀನ್ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಜಯನಗರ ಜಿಲ್ಲೆಯ ಮೂಲನಿವಾಸಿ ಮತ್ತು ಅಲೆಮಾರಿ, ಅರೆಅಲೆಮಾರಿ ಮತ್ತು ಸೂಕ್ಷ್ಮ, ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಅರ್ಟಿಫಿಸಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ತರಬೇತಿ ನೀಡಲಾಗುವುದು.
ಇದೇ ಏಪ್ರಿಲ್ 25 ರೊಳಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಬಿಇ, ಬಿಟೆಕ್ ಕೋರ್ಸ್ ಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ. ಆಭ್ಯರ್ಥಿಯು ಬಿಇ, ಬಿಟೆಕ್ ಕೋರ್ಸ್ಗಳಲ್ಲಿ ಕನಿಷ್ಠ ಶೇ.55 ರಷ್ಟು ಕಡ್ಡಾಯವಾಗಿ ಅಂಕ ಗಳಿಸಿರಬೇಕು. ಕೋರ್ಸ್ ನ ಅವಧಿಯು ಗರಿಷ್ಠ ಎರಡು ವಾರಗಳಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಆಯಾ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.