ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಅತಿಥಿ ಶಿಕ್ಷಕರ ಬೇಡಿಕೆ ಆಲಿಸದ ಭಂಡ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಬೃಹತ್ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಯಾವ ಪ್ರತಿಭಟನೆಗಳು, ಹೋರಾಟಗಳೂ ಕಾಣುತ್ತಿಲ್ಲ, ಅಲ್ಲದೇ ಅತಿಥಿ ಉಪನ್ಯಾಸಕರ ಕಷ್ಟಗಳಿಗೆ ಸ್ಪಂದಿಸುವ ವ್ಯವದಾನವೂ ಇಲ್ಲ. ಶೈಕ್ಷಣಿಕ ಕ್ಷೇತ್ರವನ್ನಂತೂ ತಾತ್ಸಾರ ಭಾವನೆಯಿಂದ ಕಾಣುತ್ತಿರುವುದು ಅತ್ಯಂತ ಖಂಡನೀಯ. ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರುಗಳ ನ್ಯಾಯಸಮ್ಮತ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಂಘದ ಪ್ರಮುಖರು, ಪದಾಧಿಕಾರಿಗಳು ಹಾಗೂ ಶಿಕ್ಷಕ ಬಂಧುಗಳು ಉಪಸ್ಥಿತರಿದ್ದರು.