ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಲೆ ಏರಿಕೆ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಬಿಜೆಪಿ ನಾಯಕರು ಗುರುವಾರ ದಿಢೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಗುರುವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ನೊಂದಿದ್ದಾರೆ. ಸಂವಿಧಾನ ವಿರುದ್ಧವಾಗಿ ಧರ್ಮಾಧರಿತವಾಗಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ. 4 ರಷ್ಟು ಮೀಸಲಾತಿ ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ವರ್ಗಾವಣೆ ಮಾಡಿಕೊಂಡಿರುವುದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ವಿಜಯೇಂದ್ರ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಏಪ್ರಿಲ್- 7 ರಿಂದ ಜನಾಕ್ರೋಶ ಯಾತ್ರೆ ಆಯೋಜಿಸಲಾಗಿದೆ. ಮೈಸೂರಿನಲ್ಲಿ ಈ ಯಾತ್ರೆ ಆಯೋಜಿಸಿದ್ದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಮಾರ್ಚ್ 7ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ, ಏಪ್ರಿಲ್ 8 ಮಂಡ್ಯ ಮತ್ತು ಹಾಸನ ಏಪ್ರಿಲ್ 9 ರಂದು ಕೊಡಗು ಮತ್ತು ಮಂಗಳೂರು ಮತ್ತು ಏಪ್ರಿಲ್ 10 ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಮೊದಲ ಹಂತದ ಹೋರಾಟ ಪೂರ್ಣಗೊಳ್ಳಲಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಎರಡನೇ ಹಂತದ ಹೋರಾಟ ಏಪ್ರಿಲ್- 13 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಹೋರಾಟ ನಡೆಯಲಿದ್ದು, ಪ್ರತಿಜಿಲ್ಲೆಯಲ್ಲಿ ಎರಡರಿಂದ ಮೂರು ಕಿಲೋಮೀಟರ್ ಪಾದಯಾತ್ರೆ ಸಾಗಲಿದೆ ಎಂದು ವಿಜಯೇಂದ್ರ ಅವರು ತಿಳಿಸಿದರು.