ಚಂದ್ರವಳ್ಳಿ ನ್ಯೂಸ್, ಮೈಸೂರು:
ಕಳೆದ ಐದು ವರ್ಷಗಳಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂ. ಅನ್ಯಾಯವಾಗಿದೆ. ಬಿಜೆಪಿ ಸಂಸದರು ಕರ್ನಾಟಕದ ಪರ ಧ್ವನಿ ಎತ್ತದೆ, ರಾಜ್ಯದ ಜನರಿಗೆ ದ್ರೋಹವೆಸಗುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರದಿಂದ ರಾಜ್ಯಕ್ಕೆ ಕೇವಲ 6498 ಕೋಟಿ ರೂ.ಗಳ ತೆರಿಗೆ ಪಾಲು ಬಂದಿದ್ದು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ., 31000 ಕೋಟಿಗೂ ಹೆಚ್ಚಾಗಿ ಉತ್ತರ ಪ್ರದೇಶ ರಾಜ್ಯಕ್ಕೆ ನೀಡಲಾಗಿದೆ ಎಂದರು.
ಅದ್ದೂರಿ ದಸರಾ-
ಈ ವರ್ಷ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ದಸರಾ ಉತ್ಸವ ಯಶಸ್ವಿಯಾಗಲು ಕಾರಣರಾದ ಜಿಲ್ಲಾಮಂತ್ರಿಗಳು ಹಾಗೂ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು. ರಾಜ್ಯದಲ್ಲಿ ಸಾಕಷ್ಟು ಮಳೆಬೆಳೆಯಾಗಿದ್ದರಿಂದ ಈ ಬಾರಿ ನಾಡ ಹಬ್ಬ ದಸರಾವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಜನರು ದಸರಾದಲ್ಲಿ ಸಂತೋಷದಿಂದ ಭಾಗವಹಿಸಿದ್ದು, ಸರ್ಕಾರದ ಶ್ರಮ ಸಾರ್ಥಕವಾಗಿದೆ ಎಂದು ತಿಳಿಸಿದರು.
ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಗರು ಹೋರಾಟ ಹಮ್ಮಿಕೊಳ್ಳಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟ ಉಪಸಮಿತಿಯು ನಿರ್ಧಾರ ಕೈಗೊಂಡಿದ್ದು, ನ್ಯಾಯಾಲಯಕ್ಕೆ ಮಂಡಿಸಿದ ನಂತರವಷ್ಟೇ ಪ್ರಕರಣ ವಾಪಸ್ಸು ಪಡೆಯಲು ಸಾಧ್ಯ ಎಂದು ತಿಳಿಸಿದರು.