ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಯೋಗೇಶ್ವರ್, ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು ಇವರ ಮಧ್ಯ ಉಪಚುನಾವಣೆ ರಂಗೇರಿದೆ.
ಎರಡು ದಿನ ಬಾಕಿ ಇರುವಂತೆ ದಿಢೀರ್ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಾರಿದ ಯೋಗೇಶ್ವರ್ ಕ್ರಮದಿಂದಾಗಿ ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಹೆಸರು ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮಣೆಹಾಕಲಾಗಿದೆ.
ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ನಡೆದ ಜೆಡಿಎಸ್–ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್ ಹೆಸರು ಘೋಷಣೆ ಮಾಡಲಾಯಿತು.
ಸ್ವತಃ ಯಡಿಯೂರಪ್ಪ ಅವರೇ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದರು.
ಕಳೆದ ಹಲವು ದಿನಗಳಿಂದ ಗೊಂದಲವಾಗಿ ಮಾರ್ಪಟ್ಟಿದ್ದ ಅಭ್ಯರ್ಥಿ ಆಯ್ಕೆ ಸಂಬಂಧ, ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು.
ಜೆಡಿಎಸ್ ಮತ್ತು ಬಿಜೆಪಿ ನಾಯಕರ ಸಮನ್ವಯ ಸಭೆಗೂ ಮೊದಲೇ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ನಿಖಿಲ್ ಕುಮಾರಸ್ವಾಮಿಯೇ ಚನ್ನಪಟ್ಟಣದ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡರು ಜೆಡಿಎಸ್ ಸಭೆ ಬಳಿಕ ಮಾತನಾಡಿ, ನಿಖಿಲ್ ಅಭ್ಯರ್ಥಿಯಾಗಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದರೆ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಬೇಕೆಂದು ನಿಖಿಲ್ ಹೇಳಿದ್ದರು. ಇಂದು ಮತ್ತೆ ಕಾರ್ಯಕರ್ತರು ಬಂದು ನಿಖಿಲ್ ಸ್ಪರ್ಧೆಗೆ ಆಗ್ರಹಿಸಿದರು. ಹೀಗಾಗಿ ನಿಖಿಲ್ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಚನ್ನಪಟ್ಟಣ ಅಭ್ಯರ್ಥಿಯಾಗಿ ಶುಕ್ರವಾರ ನಿಖಿಲ್ ನಾಮಪತ್ರ ಸಲ್ಲಿಸುತ್ತಾರೆ. ಇದರಲ್ಲಿ ನಾನು ಸಹ ಭಾಗಿಯಾಗುತ್ತೇನೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.
ಎಂಪಿ, ಎಂಎಲ್ಎ ಚುನಾವಣೆಯಲ್ಲಿ ನಿಖಿಲ್ ಸೋಲು ಕಂಡಿದ್ದರು, ಉಪ ಚುನಾವಣೆಯಲ್ಲಿ ಅವರ ಭವಿಷ್ಯ ಏನಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.